ನಾಳೆ ಅಮಿತ್‌ ಶಾ ರಾಜ್ಯಕ್ಕೆ : ಸಂಪುಟ ವಿಸ್ತರಣೆ ಕುತೂಹಲ

ಚುನಾವಣೆ ರಣತಂತ್ರಕ್ಕೆ ಮಾರ್ಗದರ್ಶನ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.29 ರಿಂದ ಮೂರು ದಿನ ರಾಜ್ಯಕ್ಕೆ ಭೇಟಿ ನೀಡಲಿದ್ದು, ಮುಖ್ಯವಾಗಿ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಶಾ ರಾಜ್ಯ ಭೇಟಿ ಬಳಿಕವೇ ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಚಿತ್ರಣ ಹೊರ ಬೀಳುವ ಸಾಧ್ಯತೆಯಿದೆ.
ಶಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಇದು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ನವೋತ್ಸಾಹ ತುಂಬಲಿದೆ. ಅವರ ಈ ಭೇಟಿಯು ಪಕ್ಷದ ಗೆಲುವಿನ ಓಟಕ್ಕೆ ಮತ್ತಷ್ಟು ಶಕ್ತಿ ತುಂಬಲಿದೆ. ಮೈಸೂರು ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕಾರ್ಯತಂತ್ರ ರೂಪಿಸುವ ನಿಟ್ಟಿನಲ್ಲಿ ಅವರ ಭೇಟಿ ಅತ್ಯಂತ ಮಹತ್ವದ್ದಾಗಲಿದೆ ಎಂದುರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಡಿಸೆಂಬರ್​ 30ರಂದು ಮಧ್ಯಾಹ್ನ 12.30ಕ್ಕೆ ಅವರು ಮಂಡ್ಯದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಮೈಸೂರು ಭಾಗದಲ್ಲಿ ಪಕ್ಷವನ್ನು ಹೆಚ್ಚು ಸದೃಢಗೊಳಿಸುವ ವಿಶ್ವಾಸವಿದೆ. ಎಂ. ಸಿ. ರಸ್ತೆಯ ಪ್ರವಾಸಿ ಮಂದಿರದ ಸಮೀಪದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಈ ಸಮಾವೇಶ ನಡೆಯಲಿದೆ. ಈ ಸಮಾವೇಶದ ಯಶಸ್ಸಿಗಾಗಿ ಸಚಿವರಾದ ಗೋಪಾಲಯ್ಯ, ನಾರಾಯಣ ಗೌಡ, ಡಾ. ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಕಾರ್ಯ ನಿರ್ವಹಿಸುತ್ತಿದ್ದಾರೆ.
ಡಿಸೆಂಬರ್​ 31ರಂದು ಬಿಎಲ್ 2 ಮತ್ತು ಬೂತ್ ಅಧ್ಯಕ್ಷರ ಮೇಲ್ಪಟ್ಟ ಕಾರ್ಯಕರ್ತರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗುತ್ತಿದೆ. ಅಮಿತ್ ಶಾ ಅವರು ಈ ಸಮಾವೇಶದಲ್ಲಿ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಲಿದ್ದಾರೆ. ರಾಜ್ಯದಲ್ಲಿ 150ಕ್ಕೂ ಹೆಚ್ಚು ಶಾಸಕ ಸ್ಥಾನ ಗೆದ್ದು ಮತ್ತೆ ಅಧಿಕಾರಕ್ಕೇರುವ ಪಕ್ಷದ ವಿಜಯ ಯಾತ್ರೆಗೆ ಹೆಚ್ಚಿನ ಬಲ ತುಂಬಲಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಜನವರಿ 2 ರಿಂದ ಜನವರಿ 12ರ ವರೆಗೆ ‘ಬೂತ್ ವಿಜಯ ಅಭಿಯಾನ’ವನ್ನು ಆಯೋಜಿಸಿದೆ. ಪಕ್ಷವು ಈಗಾಗಲೇ ಜನಸಂಕಲ್ಪ ಯಾತ್ರೆಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರಗಳ ಜನೋಪಯೋಗಿ, ಜನಪರ ಕಾರ್ಯಗಳನ್ನು ಜನರಿಗೆ ಮನದಟ್ಟು ಮಾಡಿದೆ. ಅಮಿತ್ ಶಾ ಅವರ ಭೇಟಿಯು ಪಕ್ಷದ ವಿಜಯೋತ್ಸಾಹಕ್ಕೆ ಬಲ ತುಂಬಲಿದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top