ಆಸ್ತಿ ರಕ್ಷಣೆಗೆ ಕ್ರಮ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ
ಬೆಳಗಾವಿ : ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿರುವ 35 ಸಾವಿರಕ್ಕೂ ಹೆಚ್ಚಿನ ದೇವಸ್ಥಾನಗಳ ಆಸ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ, ರಾಜ್ಯದ ಇತಿಹಾಸದಲ್ಲೇ ಪ್ರಥಮ ಬಾರಿಗೆ ದೇವಾಲಯಗಳು ಮತ್ತು ಅವುಗಳ ಆಸ್ತಿ ವಿವರಗಳನ್ನ ಸಮಗ್ರ ಸಮೀಕ್ಷೆ ಮಾಡಲು ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ನಿರ್ಧರಿಸಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಎ, ಬಿ ಮತ್ತು ಸಿ ದರ್ಜೆಯ 35 ಸಾವಿರಕ್ಕೂ ಹೆಚ್ಚು ದೇವಸ್ಥಾನಗಳಿವೆ. ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳ ಆಸ್ತಿ ಸಂರಕ್ಷಣೆ, ದೇವಾಲಯಗಳ ಸಮಗ್ರ ಮಾಹಿತಿಯನ್ನು ಕಲೆ ಹಾಕುವುದು ಹಾಗೂ ಅವುಗಳ ವಾಸ್ತವಿಕ ಸಮೀಕ್ಷೆ ನಡೆಸುವುದು ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಅಗತ್ಯವಾದ ವಿಶೇಷ ಅನುದಾನವನ್ನು ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.