ಜಗತ್ತಿನೆಲ್ಲೆಡೆಯಿಂದ ಹರಿದುಬರುತ್ತಿದೆ ಸಂತಾಪ
ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ, ಶತಾಯುಷಿ ಹೀರಾಬೆನ್ ಮೋದಿಯವರು ಗುಜರಾತ್ನ ಅಹಮದಾಬಾದ್ನಲ್ಲಿ ಶುಕ್ರವಾರ ನಸುಕಿನ ಹೊತ್ತು ನಿಧನರಾದರು.
ಹೀರಾಬೆನ್ ಅವರಿಗೆ 100 ವರ್ಷ ವಯಸ್ಸಾಗಿತ್ತು. ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ನಗರದ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.
ಹೀರಾಬೆನ್ ಮೋದಿ ಅವರು 2022ರ ಜೂನ್ 18ರಂದು 100ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಪ್ರಧಾನಿ ಮೋದಿ ಅವರು ಗಾಂಧಿನಗರ ನಿವಾಸಕ್ಕೆ ಭೇಟಿ ನೀಡಿ ತಾಯಿಗೆ ಶುಭಾಶಯ ತಿಳಿಸಿ, ಆಶೀರ್ವಾದ ಪಡೆದಿದ್ದರು. ತಾಯಿಯ ಪಾದ ತೊಳೆದು ಪೂಜಿಸಿದ್ದರು.
ಹೀರಾಬೆನ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ. ಜಗತ್ತಿನೆಲ್ಲೆಡೆಯಿಂದ ಸಂತಾಪ ಹರಿದುಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಪೂಜ್ಯ ತಾಯಿ ಹೀರಾಬೆನ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ಅತ್ಯಂತ ಬೇಸರವಾಯಿತು. ದೇಶಕ್ಕೆ ಹೆಮ್ಮೆ ತಂದ ಪುತ್ರನಿಗೆ ಜನ್ಮ ನೀಡಿದ ಮಹಾತಾಯಿಗೆ ಸದ್ಗತಿ ಕೋರುತ್ತೇನೆ. ಪ್ರಧಾನಿಯವರಿಗೆ, ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.