ಪುತ್ತೂರು : ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಆರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ (ಆರ್.ವಿಎಸ್.ಯು) ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ.
ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾವನೆಯನ್ನು ಸರಕಾರಕ್ಕೆ ಸಲ್ಲಿಸಲಾಗಿತ್ತು. ಈ ಪ್ರಸ್ತಾವನೆಯನ್ನು ಡಾ.ರೇಣುಕಾ ಪ್ರಸಾದ್ ಕೆ.ವಿ. ಅವರ ಪ್ರಯತ್ನದಿಂದ ಸರಕಾರಕ್ಕೆ ಬೇಕಾದ ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ತಪಾಸಣಾ ತಂಡಕ್ಕೆ ನೀಡಲಾಗಿತ್ತು. ಈ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರು, ಕಾಲೇಜಿನ ಕಾರ್ಯನಿರ್ವಹಣಾಧಿಕಾರಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರಾದ ಡಾ.ಉಜ್ವಲ್ ಊರುಬೈಲು ಮತ್ತು ಉದ್ದೇಶಿತ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ ಸ್ಥಾಪನಾ ಸಮಿತಿಯ ವಿಶೇಷ ಅಧಿಕಾರಿ ಡಾ.ಜಗನ್ನಾಥ ರೆಡ್ಡಿ ಸೇವೆ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರಕಾರ ಈ ಪ್ರಸ್ತಾವಕ್ಕೆ ಅನುಮೋದನೆ ನೀಡುವ ಮೂಲಕ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ದೊರೆತಂತಾಗಿದೆ. ಸರಕಾರದ ಈ ಕಾರ್ಯಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಾಲಕೃಷ್ಣ ಸಿ.ಎನ್. ಅಭಿನಂದನೆ ಸಲ್ಲಿಸಿದ್ದಾರೆ.