ಪುತ್ತೂರು: 94ಸಿ ಹಕ್ಕು ಪತ್ರಗಳಿಗೆ ಅರ್ಜಿ ಸಲ್ಲಿಸುವ ಸಂದರ್ಭ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಸರಿಪಡಿಸುವ ಕುರಿತು ಮೇಲಾಧಿಕಾರಿಗಳಿಗೆ ತಿಳಿಸಿ. ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಪುತ್ತೂರು ಗ್ರೇಡ್-2 ತಹಸೀಲ್ದಾರ್ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ.
ಪುತ್ತೂರು ತಹಸೀಲ್ದಾರ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಶನಿವಾರ ಪುತ್ತೂರು ತಾಲೂಕಿನ ಬುಳೇರಿಕಟ್ಟೆಯಲ್ಲಿರುವ ಬಲ್ನಾಡು ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಿತು.
ತಹಸೀಲ್ದಾರ್ ಜೆ. ಶಿವಶಂಕರ್ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬಲ್ನಾಡು ಗ್ರಾ.ಪಂ ಉಪಾಧ್ಯಕ್ಷೆ ಪರಮೇಶ್ವರಿ ಭಟ್ ಅವರು ವಿಷಯ ಪ್ರಸ್ತಾಪಿಸಿ 94ಸಿಯಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸುವಾಗ ಗ್ರಾ.ಪಂನಿಂದ ದೃಡೀಕರಣ ಬೇಕಾಗುತ್ತದೆ. ಆದರೆ ಪಿಡಿಓ ಅವರಿಗೆ ಈ ಬಗ್ಗೆ ಆದೇಶವಿಲ್ಲ ಎಂದು ಅವರು ದೃಡೀಕರಣ ನೀಡುತ್ತಿಲ್ಲ. ಇದರಿಂದಾಗಿ ಬಹಳಷ್ಟು ಮಂದಿ ಸಂಕಷ್ಟ ಅನುಭವಿಸುವಂತಾಗಿದ್ದು ಇದಕ್ಕೊಂದು ಪರಿಹಾರ ಸೂಚಿಸಬೇಕು ಆಗ್ರಹಿಸಿದರು.
ಉತ್ತರಿಸಿದ ಗ್ರೇಡ್-2 ತಹಶೀಲ್ದಾರ್ ಲೋಕೇಶ್ 94ಸಿ ಗೆ ಪಂಚಾಯಿತಿಯಿಂದ ದೃಡೀಕರಣ ಕಡ್ಡಾಯ ಎಂದು ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ. ಜಿಲ್ಲೆಯ ಇತರ ತಾಲೂಕುಗಳ ಪಂಚಾಯತ್‌ಗಳಲ್ಲಿ ದೃಡೀಕರಣ ನೀಡುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಆದೇಶ ಮಾಡಿಸಿದ್ದಾರೆ ಎಂದು ತಿಳಿಸಿದರು. ನಮಗೆ ಯಾವುದೇ ರೀತಿಯ ಆದೇಶ ಬಂದಿಲ್ಲ ಎಂದು ತಾ.ಪಂ ಯೋಜನಾಧಿಕಾರಿ ಸುಕನ್ಯಾ ತಿಳಿಸಿದರು. ನಿಮಗೆ ಆದೇಶ ಬಾರದಿದ್ದರೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮೂಲಕ ಎಲ್ಲಾ ತಾ.ಪಂ, ಗ್ರಾ.ಪಂಗಳಿಗೆ ಅದೇಶ ಮಾಡುವಂತೆ ಮುಂದಿನ ಸೋಮವಾರವೇ ಆದೇಶ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಡು ಪ್ರಾಣಿಗಳಿಂದ ಕೃಷಿಗಳಿಗೆ ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ನೀಡಿ ರಕ್ಷಣೆ ಒದಗಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಗ್ರಾಮಸ್ಥರು ಮನವಿ ಮಾಡಿದರು.
ಬಲ್ನಾಡು ಗ್ರಾ.ಪಂ ಅಧ್ಯಕ್ಷ ಇಂದಿರಾ ಎಸ್ ರೈ, ಭೂದಾಖಲೆಗಳ ಇಲಾಖೆಯ ಸಹಾಯಕ ನಿರ್ದೇಶಕಿ ರಮಾದೇವಿ, ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ, ತಾ.ಪಂ ಯೋಜನಾಧಿಕಾರಿ ಸುಕನ್ಯಾ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಲ್ನಾಡು ಗ್ರಾ.ಪಂ ಪಿಡಿಓ ದೇವಪ್ಪ ಪಿ.ಆರ್ ಸ್ವಾಗತಿಸಿದರು. ಕಂದಾಯ ನಿರೀಕ್ಷಕ ಗೋಪಾಲ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.