ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ
ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಅಂತಿಮ ಹಂತಕ್ಕೆ ಬಂದಿದ್ದು, ಇಂದಿನಿಂದ ಎರಡು ದಿನ ನಡೆಯಲಿರುವ ರಾಜ್ಯ ಬಿಜೆಪಿ ಚುನಾವಣಾ ಸಮಿತಿ ಸಭೆ ತೀವ್ರ ಕುತೂಹಲ ಮೂಡಿಸಿದೆ. ಎರಡು ದಿನಗಳ ಸಭೆಯ ಬಳಿಕ ರಾಜ್ಯ ಚುನಾವಣಾ ಸಮಿತಿಯಿಂದ ಕೇಂದ್ರ ಚುನಾವಣಾ ಸಮಿತಿಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಶಿಫಾರಸುಗೊಳ್ಳಲಿದೆ. ಇದರ ಮಧ್ಯೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಾಮಾಜಿ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ವ್ಯಾಪಕ ಚರ್ಚೆಗಳು ಆಗುತ್ತಿವೆ.
ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೆಸರಿನಲ್ಲಿ ಯಾರೋ ಕಿಡಿಗೇಡಿಗಳು ಅಭ್ಯರ್ಥಿಗಳ ನಕಲಿ ಪಟ್ಟಿಯನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ಧಾರೆ. ಇನ್ನು ಪಟ್ಟಿ ವೈರಲ್ ಆಗುತ್ತಿರುವುದು ಬಿಜೆಪಿ ನಾಯಕರ ಗಮನಕ್ಕೆ ಬಂದಿದ್ದು, ಕೂಡಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದು, ನಮ್ಮ ಪಕ್ಷವು ಆಂತರಿಕ ಪ್ರಜಾಪ್ರಭುತ್ವವನ್ನು ಗೌರವಿಸಿ, ಪಕ್ಷದ ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಸುತ್ತಿದೆ. ಈ ಸಮಯದಲ್ಲಿ ಸುಳ್ಳು ಅಭ್ಯರ್ಥಿಗಳ ಪಟ್ಟಿ ಹರಿಬಿಟ್ಟು ಕುಂಠಿತ ಮನಸ್ಥಿತಿಗಳು ರಾಜ್ಯದ ಜನತೆಯ ದಾರಿ ತಪ್ಪಿಸುತ್ತಿವೆ ಎಂದು ಕಿಡಿಕಾರಿದ್ದಾರೆ.
ಏಪ್ರಿಲ್ 8ರಂದು ಅಭ್ಯರ್ಥಿ ಪಟ್ಟಿ ಬಿಡುಗಡೆ
ಬೆಂಗಳೂರಿನ ಯಲಹಂಕ ರೆಸಾರ್ಟ್‌ನಲ್ಲಿ ರಾಜ್ಯ ಚುನಾವಣಾ ಸಮಿತಿ ಸಭೆ ನಡೆದಿದ್ದು, ಜಿಲ್ಲಾ ಕೋರ್ ಕಮಿಟಿ ಸಭೆಯಲ್ಲಿ ಸಂಗ್ರಹಿಸಲಾದ ಆಕಾಂಕ್ಷಿಗಳ ಪಟ್ಟಿಯನ್ನು ಫೈನಲ್ ಮಾಡಲಿದೆ. ಪ್ರತಿ ಕ್ಷೇತ್ರಕ್ಕೆ ಮೂರು ಸಂಭಾವ್ಯ ಅಭ್ಯರ್ಥಿಗಳ ಹೆಸರು ಪಕ್ಷದ ಕೇಂದ್ರ ಚುನಾವಣಾ ಸಮಿತಿಗೆ ರವಾನೆಯಾಗಲಿದೆ.
ಈ ಸಭೆಯಲ್ಲಿ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ರಾಜ್ಯಾಧ್ಯಕ್ಷ, ನಳೀನ್ ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಮಾಜಿ ಸಿಎಂಗಳಾದ ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಪಾಲ್ಗೊಂಡಿದ್ದು, ಏಪ್ರಿಲ್ 8ರಂದು ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟವಾಗಲಿದೆ ಎಂದು ಸ್ವತಃ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.