ಅಭಿವೃದ್ಧಿ ಸಹಿಸದವರಿಂದ ಅಪಪ್ರಚಾರ : ಸಂಜೀವ ಮಠಂದೂರು ಹೇಳಿಕೆ

ಪುತ್ತೂರು: ಅಭಿವೃದ್ಧಿಯನ್ನು ಸಹಿಸದ ಕೆಲವೊಂದು ವ್ಯಕ್ತಿಗಳು ತನ್ನ ತೇಜೋವಧೆ ಮಾಡುವ ಉದ್ದೇಶದಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇಂತಹ ಅಪಪ್ರಚಾರಗಳ ವಿರುದ್ಧ ಕಾನೂನು ಹೋರಾಟ ಮಾಡಲಿದ್ದು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದೇನೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಪ್ರತಿಷ್ಠಿತ ಮನೆಯಲ್ಲಿ ಹುಟ್ಟಿ ಬೆಳೆದಿರುವ ತನ್ನ ಜೀವನವನ್ನು ಧಾರ್ಮಿಕ, ಶೈಕ್ಷಣಿಕ, ಸಹಕಾರ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಿಗೆ ಮೀಸಲಾಗಿಟ್ಟಿದ್ದು, ಕಳೆದ ಹಲವು ದಶಕಗಳಿಂದ ಈ ಎಲ್ಲಾ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದೇನೆ. ಹೀಗಿರುವಾಗ ತನ್ನ ಅಭಿವೃದ್ಧಿಯನ್ನು ಸಹಿಸದ ಕೆಲವೊಂದು ವ್ಯಕ್ತಿಗಳು ತನ್ನ ತೇಜೋವಧೆ ಮಾಡುವ ಉದ್ದೇಶದಿಂದ ಇಲ್ಲಸಲ್ಲದ ಆರೋಪ ಮಾಡಿರುತ್ತಾರೆ. ಇದರಲ್ಲಿ ಯಾವುದೇ ಹುರುಳಿಲ್ಲ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ದೇವಸ್ಥಾನಗಳ ಜೀರ್ಣೋದ್ಧಾರ ಸಮಿತಿಯಲ್ಲಿ ತೊಡಗಿಸಿಕೊಂಡು ದೇವಾಲಯದ ಜೀರ್ಣೋದ್ಧಾರ ಮಾಡಿ, ಬ್ರಹ್ಮಕಲಶೋತ್ಸವದಲ್ಲಿ ಮಹತ್ತರ ಪಾತ್ರ ವಹಿಸಿರುತ್ತೇನೆ. ಶೈಕ್ಷಣಿಕವಾಗಿ ವಿಶೇಷವಾಗಿ ಸರಕಾರಿ ಶಾಲೆಗಳಿಗೆ ಪ್ರಾಥಮಿಕ ಅವಶ್ಯಕತೆಗಳನ್ನು ಕಲ್ಪಿಸುವಲ್ಲಿ ಪ್ರಾಮಾಣಿಕ ಸೇವೆ ಮಾಡಿಕೊಂಡು ಬಂದಿದ್ದೇನೆ. ರಾಜಕೀಯ, ಸಹಕಾರ ಕ್ಷೇತ್ರದಲ್ಲಿ  ತನ್ನನ್ನು ತೊಡಗಿಸಿಕೊಂಡು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಕಳೆದ ಅವಧಿಯಲ್ಲಿ ಶಾಸಕರಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ ತೃಪ್ತಿ ತನಗಿದೆ. ವಿಶೇಷವಾಗಿ ಕಳೆದ 5 ವರ್ಷಗಳಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 1100 ಕೋಟಿ ರೂ.ಗೂ ಮಿಕ್ಕಿ ಅನುದಾನ ತರಿಸಿ ಜಾತಿ, ಮತ, ಪಂಥ ನೋಡದೆ ಅಭಿವೃದ್ಧಿ ಕಾರ್ಯ ಮಾಡಿರುತ್ತೇನೆ. ಅಲ್ಲದೆ ಬಡ ವರ್ಗದ ಜನರಿಗೆ ಸರಕಾರದಿಂದ ಸಿಗುವ ಎಲ್ಲಾ ಸಕಲ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದೇನೆ.































 
 

ಹೀಗಿದ್ದೂ ಇತ್ತೀಚೆಗೆ ವೈರಲ್ ಆಗಿರುವ ಚಿತ್ರಣ ಆಧುನಿಕ ತಂತ್ರಜ್ಞಾನ ಬಳಸಿ ಮಾಡಿರುವುದಾಗಿದ್ದು, ಅಂತಹ ಯಾವುದೇ ಘಟನೆಗಳು ನಡೆದಿಲ್ಲ. ಈ ಚಿತ್ರಣ ರಾಜಕೀಯ ವಿರೋಧಿಗಳು ನನ್ನನ್ನು ರಾಜಕೀಯವಾಗಿ ಮುಗಿಸಲು ಮಾಡಿರುವ ತಂತ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ರಾಜಕೀಯ ವ್ಯಕ್ತಿಗಳನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನಗಳು ನಡೆದಿರುವುದು ಸರ್ವೆ‍ಸಾಮಾನ್ಯವಾಗಿದೆ ಎಂದಿದ್ದಾರೆ.

ಮಹಾಲಿಂಗೇಶ್ವರನಲ್ಲಿ ಪ್ರಾರ್ಥನೆ:

ಈ ಆರೋಪದ ವಿರುದ್ಧ ಕಾನೂನು ಹೋರಾಟ ಮಾಡಲು ನಾನು ಸಿದ್ಧತೆ ನಡೆಸಿದ್ದೇನೆ. ಅಲ್ಲದೆ ಈ ರೀತಿ ಪ್ರಚಾರ ಮಾಡುವವರ ವಿರುದ್ಧ ನಾನು ನಂಬಿದ ಆರಾಧ್ಯ ದೇವರಾದ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top