ಕಾಂಗ್ರೆಸ್ ನಾಯಕನ ವಿರುದ್ಧ ಕೇಸು ದಾಖಲು
ಚೆನ್ನೈ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ನ್ಯಾಯಾಲಯದ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ತಮಿಳುನಾಡಿನ ಕಾಂಗ್ರೆಸ್ ನಾಯಕರೊಬ್ಬರು ಬೆದರಿಕೆಯೊಡ್ಡಿದ್ದಾರೆ.
ಮೋದಿ ಹೆಸರಿನವರೆಲ್ಲ ಕಳ್ಳರು ಎಂದು ಟೀಕಿಸಿದ್ದ ರಾಹುಲ್ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದ ಸೂರತ್ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ಮಾ. 23 ರಂದು ರಾಹುಲ್ ಗಾಂಧಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದಾರೆ. ಶಿಕ್ಷೆಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ರಾಹುಲ್ ಗಾಂಧಿ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ವಿರೋಧ ಪಕ್ಷದ ನಾಯಕರ ದನಿ ಅಡಗಿಸಲು ಯತ್ನಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಪಕ್ಷವು ದೇಶಾದ್ಯಂತ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ.
ರಾಹುಲ್ ಗಾಂಧಿ ಸಂಸದ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ತಮಿಳುನಾಡಿನ ದಿಂಡುಗಲ್‌ನಲ್ಲಿ ಕಾಂಗ್ರೆಸ್‌ನ ಎಸ್‌ಸಿ/ಎಸ್‌ಟಿ ವಿಭಾಗ ನಡೆಸಿದ ಪ್ರತಿಭಟನೆ ವೇಳೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್, ಮಾ.23ರಂದು ಸೂರತ್ ನ್ಯಾಯಾಲಯದ ನ್ಯಾಯಾಧೀಶ ಎಚ್. ವರ್ಮಾ ನಮ್ಮ ನಾಯಕ ರಾಹುಲ್ ಗಾಂಧಿ ಅವರಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅವರ ನಾಲಿಗೆ ಕತ್ತರಿಸುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಣಿಕಂದನ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.