ದಿಲ್ಲಿಯಲ್ಲಿ ನಡೆಯಲಿದೆ ಮಹತ್ವದ ಸಂಸದೀಯ ಮಂಡಳಿ ಸಭೆ
ಬೆಂಗಳೂರು : ದಿಲ್ಲಿಯಲ್ಲಿಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿ, ಇಂದು ರಾತ್ರಿ ಅಥವಾ ನಾಳೆ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಪ್ರಧಾನಿ ನೇತೃತ್ವದ ಈ ಸಭೆಯಲ್ಲಿ 140ಕ್ಕೂ ಹೆಚ್ಚು ಹೆಸರುಗಳನ್ನು ಒಳಗೊಂಡಿರುವ ಮೊದಲ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿದ್ದು, ಪಟ್ಟಿ ಭಾನುವಾರ ರಾತ್ರಿ ಅಥವಾ ಸೋಮವಾರ ಬೆಳಗ್ಗೆ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ಎಲ್ಲಾ 224 ಸ್ಥಾನಗಳ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯುತ್ತವೆ. ಆದರೂ, ಕಾಂಗ್ರೆಸ್ ಮತ್ತು ಜೆಡಿಎಸ್ತಮ್ಮ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ನಂತರ ಎರಡನೇ ಪಟ್ಟಿ ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.
ಕಾಂಗ್ರೆಸ್ ಇನ್ನೂ 58 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಜೆಡಿಎಸ್ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ. ಪಟ್ಟಿ ಬಿಡುಗಡೆ ಬಳಿಕ ಬಂಡಾಯವೇಳುವ ನಾಯಕರು ಪಕ್ಷಾಂತರ ಮಾಡುವುದು ಸಾಮಾನ್ಯ. ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಪಟ್ಟಿ ಬಿಡುಗಡೆ ನಂತರವೇ ಬಿಜೆಪಿ ಕೆಲವು ಕ್ಷೇತ್ರಗಳಿಗೆ ಹೆಸರುಗಳನ್ನು ಅಂತಿಮಗೊಳಿಸಲಿದೆ ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಈ ನಡುವೆ ನಿನ್ನೆಯಷ್ಟೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಪ್ರತಿ ಕ್ಷೇತ್ರದ ಆಕಾಂಕ್ಷಿಗಳ ಕುರಿತು ಸಭೆ ನಡೆಸಿದರು. ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್, ರಾಜ್ಯ ಘಟಕದ ಮುಖ್ಯಸ್ಥ ನಳಿನ್ ಕುಮಾರ್ ಕಟೀಲ್, ಕರ್ನಾಟಕ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ಕೇಂದ್ರ ಆರೋಗ್ಯ ಸಚಿವ ಮತ್ತು ಚುನಾವಣಾ ಸಹ ಉಸ್ತುವಾರಿ ಮನ್ಸುಖ್ ಮಾಂಡವಿಯ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ, ಆರ್‌ಎಸ್‌ಎಸ್ ಕಾರ್ಯಾಧ್ಯಕ್ಷ ಸಿಆರ್ ಮುಖಂದ್ ಮತ್ತು ಜಲಸಂಪನ್ಮೂಲ ಸಚಿವ ಗೋವಿಂದ್ ಕಾರಜೋಳ ಉಪಸ್ಥಿತರಿದ್ದರು.