ಬೆಂಗಳೂರು : ಬಿಜೆಪಿ ಟಿಕೆಟ್ ಸಿಗದೆ ಹತಾಶರಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿ ಇಂದು ವಿಧ್ಯುಕ್ತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಮೂಲಕ ದಶಕಗಳ ಬಿಜೆಪಿ ನಂಟನ್ನು ಅಧಿಕೃತವಾಗಿ ಕಡಿದುಕೊಂಡಿದ್ದಾರೆ.
ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ರವಾನಿಸಿದ್ದ ಶೆಟ್ಟರ್ ಇಂದು ಬೆಳಗ್ಗೆ ಕಾಂಗ್ರೆಸ್ ಪಕ್ಷ ಸೇರಿದರು. ಈ ಮೂಲಕ ತಮ್ಮ ಮೂರು ದಶಕಗಳ ಬಿಜೆಪಿಯೊಂದಿಗಿನ ಸಂಬಂಧಕ್ಕೆ ಜಗದೀಶ್ ಶೆಟ್ಟರ್ ವಿದಾಯ ಹಾಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಸೇರ್ಪಡೆಯಾದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ, ಪ್ರಬಲ ನಾಯಕ. ರಾಜ್ಯದ ಸಿಎಂ, ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದು, ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಸೇರ್ಪಡೆಯಾಗುತ್ತಿದ್ದಾರೆ. ಶೆಟ್ಟರ್ ಪಕ್ಷ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದರು. ಡಿ.ಕೆ. ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಇಂದು ಐತಿಹಾಸಿಕ, ವಿಶೇಷವಾದ ದಿನವಾಗಿದೆ. ಇದು ಆಡಳಿತಕ್ಕೆ ಬದಲಾವಣೆ ತರುವ ದಿನವಾಗಿದೆ. ರಾಜ್ಯ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆ ಆಗಿದೆ ಎಂದರು.