ಟಿಕೆಟ್ ಸಿಗದೆ ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಮುಖ್ಯಮಂತ್ರಿ
ಬೆಂಗಳೂರು : ಟಿಕೆಟ್ ಸಿಗದ ನಿರಾಶೆಯಲ್ಲಿ ಬಿಜೆಪಿ ತೊರೆದಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.
ಜಗದೀಶ್ ಶೆಟ್ಟರ್ ಅವರನ್ನು ಕಾಂಗ್ರೆಸ್‌ಗೆ ಕರೆತರುವ ಹೊಣೆಯನ್ನು ಲಿಂಗಾಯಿತ ನಾಯಕರಾದ ಎಂ.ಬಿ. ಪಾಟೀಲ್ ಹಾಗೂ ಶಾಮನೂರು ಶಿವಶಂಕರಪ್ಪ ಅವರಿಗೆ ನೀಡಲಾಗಿದೆ.
ಭಾನುವಾರ ತಡ ರಾತ್ರಿಯವರೆಗೂ ಶಾಮನೂರ ಶಿವಶಂಕರಪ್ಪ ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಎಂ.ಬಿ. ಪಾಟೀಲ್ ಅವರು ಶೆಟ್ಟರ್ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಕಾಂಗ್ರೆಸ್ ನಾಯಕರ ಮಾತುಕತೆ ಯಶಸ್ವಿಯಾಗಿದ್ದು, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಶೆಟ್ಟರ್ ಅವರು ಕಾಂಗ್ರೆಸ್ ಸೇರಲು ಒಪ್ಪಿದ್ದು, ತಮ್ಮ ಜತೆ ಬರುವ ನಾಯಕರಿಗೂ ಸೂಕ್ತ ಸ್ಥಾನಮಾನ ನೀಡಬೇಕು, ಪಕ್ಷ ಅಧಿಕಾರಕ್ಕೆ ಬಂದರೆ ತಮ್ಮ ಗೌರವಕ್ಕೆ ತಕ್ಕ ಸ್ಥಾನಮಾನ ನೀಡಬೇಕೆಂದು ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.