ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಶಾ ತಿಮ್ಮಪ್ಪ ಏ.20 ಗುರುವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ ರಾವ್ ಬಪ್ಪಳಿಗೆ ತಿಳಿಸಿದ್ದಾರೆ.
ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಒಂದು ಅಭೂತಪೂರ್ವ ಕಾರ್ಯಕ್ರಮವಾಗಲಿದ್ದು, ಗ್ರಾಮ ಮಟ್ಟದಿಂದ ಸುಮಾರು 10 ರಿಂದ 15 ಸಾವಿರ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ನಾಮಪತ್ರ ಪ್ರಕ್ರಿಯೆಗೆ ಸಾಕ್ಷಿಯಾಗಲಿದ್ದಾರೆ ಎಂದು ತಿಳಿಸಿದರು.
ಬೆಳಿಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪ್ರಾರ್ಥನೆ ಸಲ್ಲಿಸಲಾಗುವುದು. ಬಳಿಕ ಅಂಚೆ ಕಚೇರಿ ಬಳಿಯಿಂದ ಬಸ್ ನಿಲ್ದಾಣದ ತನಕ ಸಾಗಿ ಕೋರ್ಟ್ ರಸ್ತೆಯಾಗಿ ಕಿಲ್ಲೆ ಮೈದಾನದ ತನಕ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಿಲ್ಲೆ ಮೈದಾನದಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹಾಗೂ ಚಲನಚಿತ್ರ ನಟಿ ಶೃತಿ ಪಾಲ್ಗೊಳ್ಳಲಿದ್ದಾರೆ.
ಪುತ್ತೂರಿನಲ್ಲಿ ಬಿಜೆಪಿಗೆ 100 ಶೇ. ಕಾಂಗ್ರೆಸ್ ಅಭ್ಯರ್ಥಿಯೇ ಎದುರಾಳಿ ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಚಂದ್ರಶೇಖರ್ ರಾವ್, ಮುಂದಿನ ದಿನಗಳಲ್ಲಿ ಮೂಲ್ಕಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪುತ್ತೂರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಕೇಳಿಕೊಂಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಚುನಾವಣಾ ಕಾರ್ಯಾಲಯ ವಿಭಾಗದ ರಾಮದಾಸ್ ಹಾರಾಡಿ, ಚುನಾವಣಾ ನಿರ್ವಹಣಾ ಸಮಿತಿಯ ರಾಧಾಕೃಷ್ಣ ಬೋರ್ಕರ್, ಪ್ರಚಾರ ವಿಭಾಗದ ಪ್ರಮುಖರಾದ ಶಿವಕುಮಾರ್, ಪುನಿತ್ ಮಾಡತ್ತಾರು ಉಪಸ್ಥಿತರಿದ್ದರು.