ಏ.24 ಅಥವಾ 25ರಂದು ಪ್ರಕಟ
ಬೆಂಗಳೂರು : 2022–23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಈ ಸಲ ಬಹಳ ಬೇಗ ಪ್ರಕಟವಾಗಲಿದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಏಪ್ರಿಲ್ ಕೊನೆಯ ವಾರದಲ್ಲಿ ಫಲಿತಾಂಶ ಪ್ರಕಟವಾಗುವುದು ಬಹುತೇಕ ಖಚಿತವಾಗಿದೆ. ಏ. 24 ಅಥವಾ ಏ. 25 ರಂದು ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣಾ ಪ್ರಕ್ರಿಯೆಗಳ ಜತೆಗೆ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಉಪನ್ಯಾಸಕರು ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿದ್ದಾರೆ.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಭಾರಿ ಎಲ್ಲಾ ವಿಷಯಗಳಲ್ಲೂ 20 ಅಂಕಗಳಿಗೆ ಬಹು ಆಯ್ಕೆಗಳನ್ನು ನೀಡಲಾಗಿತ್ತು. ರಾಜ್ಯದ 5,716 ಕಾಲೇಜುಗಳ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾರ್ಚ್ 9 ರಿಂದ ಮಾ.29 ರವರೆಗೆ 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು. ರಾಜ್ಯದ ಒಟ್ಟು 3,63,698 ವಿದ್ಯಾರ್ಥಿಗಳು ಮತ್ತು 3,62,497 ವಿದ್ಯಾರ್ಥಿನಿಯರು ಸೇರಿ ಒಟ್ಟು 7,26,195 ಅಭ್ಯರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದರು.