ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ ಗೋರಖಪುರದ ಸಂತ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಳಸಿ ಹಾರವನ್ನು ಹಾಕಿ ಸ್ವಾಗತಿಸಲಾಯಿತು.
ಬಳಿಕ ಶ್ರೀ ಮಹಾಲಿಂಗೇಶ್ವರ ದೇವರ ಗರ್ಭಗುಡಿಯ ಮುಂಭಾಗದಲ್ಲಿ ದೇವರಿಗೆ ಆರತಿ ಬೆಳಗಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ವಸಂತ ಕೆದಿಲಾಯ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು.
ಈ ಸಂದರ್ಭ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಸಂಜೀವ ಮಠಂದೂರು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ ಭಟ್, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಚಂದ್ರಶೇಖರ್ ರಾವ್ ಬಪ್ಪಳಿಗೆ ಮೊದಲಾದವರು ಉಪಸ್ಥಿತರಿದ್ದರು.