ಕಾಪು: ಬೃಹತ್ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದು, ಇಬ್ಬರು ಪ್ರಯಾಣಿಕರು ಮೃತಪಟ್ಟಿರುವ ಬಗ್ಗೆ ಕಾಪು – ಶಿರ್ವ ರಸ್ತೆಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಮರ ಬುಡಸಹಿತ ಬಿದ್ದಿದ್ದು, ಮಲ್ಲಾರು ಚಂದ್ರನಗರದ ಬಳಿ ಗುರುವಾರ ರಾತ್ರಿ 8 ಗಂಟೆ ಹೊತ್ತಿಗೆ ಈ ದುರ್ಘಟನೆ ಸಂಭವಿಸಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದರೆ, ಚಾಲಕ ಪವಾಡ ಸದೃಶ ಪಾರಾಗಿದ್ದಾರೆ.
ಪಾದೂರು ಕೂರಾಲು ರೈಸ್‌ಮಿಲ್ ಬಳಿಯ ನಿವಾಸಿ ಪುಷ್ಪಾ ಕುಲಾಲ್ (45) ಮತ್ತು ಕಳತ್ತೂರು ನಿವಾಸಿ ಕೃಷ್ಣ (48) ಮೃತಪಟ್ಟವರು. ರಿಕ್ಷಾ ಚಾಲಕ ಷರೀಫ್ ಪವಾಡ ಸದೃಶ ರೀತಿಯಲ್ಲಿ ರಿಕ್ಷಾದಿಂದ ಜಿಗಿದು ಪಾರಾಗಿದ್ದಾರೆ.
ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಮರವನ್ನು ತೆರವುಗೊಳಿಸಲು ಹರಸಾಹಸ ಪಡಬೇಕಾಯಿತು. ಪೊಲೀಸ್, ಮೆಸ್ಕಾಂ, ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ದಳ ಸಹಿತ ನೂರಾರು ಮಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿ ಜೆಸಿಬಿ, ಕ್ರೇನ್ ಸಹಾಯದಿಂದ ಒಂದೂವರೆ ಗಂಟೆ ಪರಿಶ್ರಮದ ಬಳಿಕ ಮರವನ್ನು ಬದಿಗೆ ಸರಿಸಲಾಯಿತು. ರಿಕ್ಷಾದೊಳಗೆ ಸಿಲುಕಿದ್ದವರು ಅಷ್ಟರಲ್ಲೇ ಮೃತಪಟ್ಟಿದ್ದರು. ಮೃತದೇಹಗಳನ್ನು ಆ್ಯಂಬುಲೆನ್ಸ್ ಮೂಲಕ ಉಡುಪಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು.
ಪುಷ್ಪಾ ಕುಲಾಲ್ ಕಾಪುವಿನಿಂದ ಮನೆಗೆ ತೆರಳುತ್ತಿದ್ದರು. ಅವರು ಪತಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಮನೆಯಲ್ಲಿ ಶಾಶ್ವತ ಅಂಗೈವಕಲ್ಯದಿಂದ ಬಳಲುತ್ತಿರುವ ಸಹೋದರನೊಬ್ಬನಿದ್ದು, ಅವರ ಸಂಪೂರ್ಣ ಆರೈಕೆಯ ಜವಾಬ್ದಾರಿಯನ್ನು ಪುಷ್ಪಾ ಅವರೇ ನಿರ್ವಹಿಸುತ್ತಿದ್ದರು. ತಾಯಿಯಂತೆ ಆರೈಕೆ ಮಾಡುತ್ತಿದ್ದ ಸಹೋದರಿಯನ್ನು ಕಳೆದುಕೊಂಡ ಅವರ ಆಕ್ರಂದನ ಮುಗಿಲು ಮುಟ್ಟಿದೆ. ಮೃತ ಕೃಷ್ಣ ಮುಖಾರಿ ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಸ್ಥಳದಲ್ಲಿ ಜಮಾಯಿಸಿದ ಸಾವಿರಾರು ಮಂದಿಯನ್ನು ನಿಯಂತ್ರಿಸಲು ಕಾಪು ಪೊಲೀಸರು ಪರದಾಡುವಂತಾಯಿತು. ರಸ್ತೆ ಸಂಚಾರವೂ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ವಾಹನಗಳಿಗೆ ಬದಲಿ ರಸ್ತೆ ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಯಿತು.
ಇನ್ನೊಂದು ರಿಕ್ಷಾ ಪಾರು:
ಮರ ಬೀಳುವಾಗ ಮತ್ತೂಂದು ರಿಕ್ಷಾ ಸ್ಪಲ್ಪದರಲ್ಲೇ ಪಾರಾಗಿದ್ದು ಚಾಲಕನ ಸಕಾಲಿಕ ಕ್ರಮದಿಂದ ಎಲ್ಲರೂ ಅಲ್ಪಸ್ವಲ್ಪ ಗಾಯಗಳೊಂದಿಗೆ ಪಾರಾಗಿದ್ದಾರೆ. ಮರ ಬೀಳುತ್ತಿರುವುದನ್ನು ಗಮನಿಸಿದ ಚಾಲಕ ಕೂಡಲೇ ರಿಕ್ಷಾವನ್ನು ಮುಂದಕ್ಕೆ ಚಲಾಯಿಸಲು ಯತ್ನಿಸಿದಾಗ ರಿಕ್ಷಾ ಮಗುಚಿ ಬಿದ್ದಿತು. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.