ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗಬೇಕು ಎನ್ನುವುದು ಸಂಪ್ರದಾಯ. ಇದನ್ನು ಮುರಿಯಬಾರದು. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪಟ್ಟನಾಯಕನಹಳ್ಳಿಯ ಸ್ಫಟಿಕಪುರಿ ಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಆಗ್ರಹಿಸಿದ್ದಾರೆ.
ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ನಡೆದ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಸಭೆಯ ಬಳಿಕ ಅವರು ಮಾತನಾಡಿದರು.
ಹಿಂದಿನಿಂದ ಬಂದ ಸಂಪ್ರದಾಯವನ್ನು ಪಾಲಿಸುವ ಪರಿಪಾಠ ಬೆಳೆಸಿಕೊಳ್ಳಬೇಕು. ಈ ಹಿಂದೆಯೂ ಕಾಂಗ್ರೆಸ್ ಚುನಾವಣೆಯಲ್ಲಿ ಬಹುಮತ ಪಡೆದುಕೊಂಡಾಗ, ಕೆಪಿಸಿಸಿ ಅಧ್ಯಕ್ಷರನ್ನೇ ಮುಖ್ಯಮಂತ್ರಿಯಾಗಿ ಆರಿಸಲಾಗುತ್ತಿತ್ತು. ಈಗಲೂ ಇದೇ ಸಂಪ್ರದಾಯವನ್ನು ಮುಂದುವರಿಸಬೇಕು ಎಂದು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.
ಪಕ್ಷವು ಸಂಕಷ್ಟದಲ್ಲಿದ್ದಾಗ ಹಗಲು ರಾತ್ರಿ ಎನ್ನದೇ ಸಂಘಟಿಸಿ ಅಧಿಕಾರಕ್ಕೆ ತಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರು.