ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಜತೆಗೆ ಮೊದಲ ಹಂತದಲ್ಲಿ 8 ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಒಯ್ದ ಪಟ್ಟಿಯಲ್ಲಿ 8 ಮಂದಿಯ ಹೆಸರನ್ನು ಮಾತ್ರ ಅಂತಿಮಗೊಳಿಸಿದೆ.
ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ವೇದಿಕೆ ಮೇಲೆ 30 ಗಣ್ಯರು ಮಾತ್ರ ಕುಳಿತುಕೊಳ್ಳಲು ಆಸನದ ವ್ಯವಸ್ಥೆ ಮಾಡಲಾಗಿದೆ. ವೇದಿಕೆ ಮುಂಭಾಗ ಶಾಸಕರು, ಶಾಸಕರ ಕುಟುಂಬಸ್ಥರಿಗೆ ಅವಕಾಶ ನೀಡಲಾಗಿದೆ. ವಿವಿಐಪಿಗಳು ಹಾಗೂ ಹಿರಿಯ ಅಧಿಕಾರಿಗಳಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಮಧ್ಯಭಾಗದಲ್ಲಿ ಸುಮಾರು 40 ಸಾವಿರ ಆಸನದ ವ್ಯವಸ್ಥೆ ಮಾಡಲಾಗಿದ್ದು, ಸ್ಟೇಡಿಯಂ ಗ್ಯಾಲರಿಯಲ್ಲಿ ಸಾರ್ವಜನಿಕರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಸ್ಟೇಡಿಯಂ ಒಳಭಾಗದಲ್ಲಿ ಹತ್ತು ಬೃಹತ್ ಎಲ್ಇಡಿ ಅಳವಡಿಸಲಾಗಿದ್ದು, ಸ್ಟೇಡಿಯಂ ಹೊರಗಡೆಯೂ ಎಲ್ಇಡಿ ಪರದೆ ಅಳವಡಿಕೆ ಮಾಡಲಾಗಿದೆ.
ಸಿಪಿಎಂ ಅಸಮಾಧಾನ
ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡದ್ದಕ್ಕೆ ಕೇರಳದ ಆಡಳಿತಾರೂಢ ಸಿಪಿಐ(ಎಂ) ಅಸಮಾಧಾನ ವ್ಯಕ್ತಪಡಿಸಿದೆ. ಸಿಪಿಎಂ ಹಿರಿಯ ನಾಯಕ ಮತ್ತು ಎಡ ಪ್ರಜಾಸತ್ತಾತ್ಮಕ ರಂಗದ ಸಂಚಾಲಕ ಇ.ಪಿ. ಜಯರಾಜನ್ ಆಹ್ವಾನ ನೀಡದ್ದಕ್ಕೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ರಾಜಕೀಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರಿಯಾದ ಮಾರ್ಗಗಳನ್ನು ತೆಗೆದುಕೊಳ್ಳುತ್ತಿಲ್ಲ. ಒಂದು ವೇಳೆ ಕಾಂಗ್ರೆಸ್ ಇಂತಹ ಕ್ರಮಕ್ಕೆ ಮುಂದಾದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಭವಿಷ್ಯ ಕೂಡ ಅನಿಶ್ಚಿತವಾಗಲಿದೆ ಎಂದು ಜಯರಾಜನ್ ಹೇಳಿದ್ದಾರೆ.