ಪುತ್ತೂರು: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಿನ ಮಹತ್ವ ಪಡೆಯುತ್ತದೆ. ಸಾಧನೆಗೆ ಬುದ್ಧಿವಂತಿಕೆಯ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಸಮಾಜ ಸೇವಾ ಕಾರ್ಯಕರ್ತ ಯತೀಶ್ ಆರ್ವಾರ್ ಹೇಳಿದರು.
ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಸನ್ಮಾನ “ಅಭಿವಂದನಮ್-2023” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ನಾವು ನಮಗೋಸ್ಕರ ಮಾತ್ರವಲ್ಲದೇ ದೇಶಕ್ಕೋಸ್ಕರ ಬದುಕಬೇಕು. ಕೃಷ್ಣಂ ವಂದೇ ಜಗದ್ಗುರುಮ್ ಎಂಬ ನಂಬಿಕೆ ಇರುವ ನಾವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಗಳಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ.ಶಿವಪ್ರಕಾಶ್. ಎಂ ಹಾಗೂ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸುಂದರ ಗೌಡ ಶುಭ ಹಾರೈಸಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ.ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಹಲವಾರು ವರ್ಷಗಳ ಪರಿಶ್ರಮದಿಂದ ಗಳಿಸಿದ ಈ ಸಾಧನೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕಿರಿಯರ ಮೇಲಿದೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಕುಮಾರಿ ಹಿಮಾನಿ ತಾನು ಕಲಿತ ಸಂಸ್ಥೆ ಮತ್ತು ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದವನ್ನು ಸ್ಮರಿಸಿಕೊಂಡು, ತನ್ನ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು. ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಚಾಲಕ ರವಿನಾರಾಯಣ ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹಶಿಕ್ಷಕ ಶ್ರೀ ರಾಧಾಕೃಷ್ಣ ರೈ ವಂದಿಸಿದರು. ಸಹಶಿಕ್ಷಕಿಯರಾದ ಸೌಮ್ಯ ಕುಮಾರಿ ಹಾಗೂ ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಶ್ರೀ ಪ್ರಶಾಂತ್ ಭಟ್ ಮತ್ತು ಶ್ರೀಮತಿ ಪುಷ್ಪಲತಾ.ಬಿ.ಕೆ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶಾಂತಿ ಶೆಣೈ ಉಪಸ್ಥಿತರಿದ್ದರು.
ಸಮಾರಂಭದ ಆರಂಭದಲ್ಲಿ ಎಸ್.ಎಸ್.ಎಲ್.ಸಿಯ ಎಲ್ಲಾ ಸಾಧಕ ವಿದ್ಯಾರ್ಥಿಗಳನ್ನು ಸ್ಕೌಟ್ಸ್ ವಿದ್ಯಾರ್ಥಿಗಳ ತಂಡ ಬ್ಯಾಂಡ್ ವಾದನದೊಂದಿಗೆ ಯಾದವಶ್ರೀ ಸಭಾಂಗಣಕ್ಕೆ ಬರಮಾಡಿಕೊಳ್ಳಲಾಯಿತು. ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿದ್ದ ಶ್ರೀ ಮಹಾಲಿಂಗೇಶ್ವರ ದೇವರ ಸ್ಮರಣಿಕೆ ಹಾಗೂ ಪ್ರಶಸ್ತಿ ಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿ ಶುಭ ಕೋರಲಾಯಿತು.