ಧರ್ಮಸ್ಥಳ : ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಿರುವ ಗ್ಯಾರಂಟಿ ಯೋಜನೆಗಳಲ್ಲೊಂದಾದ “ಶಕ್ತಿ “ ಯೋಜನೆ ಕುರಿತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ತನ್ನ ಟ್ವಿಟ್ಟರ್ ಖಾತೆಯಲ್ಲಿ ಸಿದ್ಧರಾಮಯ್ಯ ಅವರು ಹಂಚಿಕೊಂಡಿದ್ದು, 14ನೇ ಬಜೆಟ್ ನ ಫಲಶ್ರುತಿಗೆ ಮೆಚ್ಚುಗೆ ವ್ಯಕ್ತಪಡಿಸಿ, ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ಶಕ್ತಿ ಯೋಜನೆಗೆ ಸಿಕ್ಕಿರುವ ಮನ್ನಣೆಯಾಗಿದೆ ಎಂದು ಅವರು ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ಧರ್ಮಸ್ಥಳಕ್ಕೆ ಬರುವ ಮಹಿಳೆಯರ ಸಂಖ್ಯೆ ಜಾಸ್ತಿಯಾಗಿದೆ. ಮಂಜುನಾಥ ಸ್ವಾಮಿಗೆ ಸಿದ್ಧರಾಮಯ್ಯರ ಹೆಸರಿನಲ್ಲಿ ಕಾಣಿಕೆ ಹಾಕುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಅವಕಾಶ ಸಿಕ್ಕಾಗ ಧರ್ಮಸ್ಥಳಕ್ಕೆ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಿ ಎಂದು ಸಿದ್ಧರಾಮಯ್ಯ ಅವರಿಗೆ ಧರ್ಮಾಧಿಕಾರಿ ಡಾ.ಹೆಗ್ಗಡೆಯವರು ಆಹ್ವಾನ ನೀಡಿದ್ದಾರೆ.
ಅನೇಕ ಮಹಿಳೆಯರು ನಿಮ್ಮ ಹೆಸರಿನಲ್ಲಿ ಶ್ರೀ ಮಂಜುನಾಥ್ ಸ್ವಾಮಿಗೆ ಸೇವೆ, ಕಾಣಿಕೆ ಸಲ್ಲಿಸುತ್ತಿದ್ದಾರೆ. ಬಜೆಟ್ ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿದ್ದಕ್ಕೆ ಧನ್ಯವಾದ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.