ಉಡುಪಿ: ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ವಿವಾದ ಪ್ರಕರಣವನ್ನು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ ತನಿಖೆ ನಡೆಸಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಹಾಗೂ ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಹೇಳಿದ್ದಾರೆ.
ಪ್ರಕರಣದ ಕುರಿತು ಎಸ್ ಪಿ ಹಾಗೂ ಡಿಸಿ ಜೊತೆ ಚರ್ಚಿಸಿದ ಬಳಿಕ ಅವರು ಮಾತನಾಡಿ, ಮಹಿಳಾ ಆಯೋಗ ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಲು ಬಂದಿಲ್ಲ.ಯಾವುದೇ ಒಂದು ನಿರ್ದಿಷ್ಟ ಕೋಮುವಿನ ಮಹಿಳೆಯ ರಕ್ಷಣೆ ನಾವು ಬಂದಿಲ್ಲ. ಈ ಪ್ರಕರಣಕ್ಕೆ ಯಾವುದೇ ಕೋಮು ಬಣ್ಣ ಬಳಿಯಬೇಡಿ. ನಮಗೆ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ. ಯಾವುದೇ ಫೋಟೋ ಅಥವಾ ವಿಡಿಯೋ ಲಭ್ಯವಿಲ್ಲ. ವಿಜ್ಞಾನ ಪ್ರಯೋಗಾಲಯದ ವರದಿ ಬಂದ ನಂತರ ಸ್ಪಷ್ಟತೆ ಸಿಗಬೇಕು ಎಂದು ಹೇಳಿದ್ದಾರೆ.
ಪ್ರಕರಣ ಇಷ್ಟೊಂದು ವೈರಲ್ ಆಗಲು ಕಾರಣವೇನು ಎಂದು ನೋಡಬೇಕಿದೆ. ತನಿಖೆ ನಡೆಸಿ ಸಾಕ್ಷಿಗಳ ಸಂಗ್ರಹ ಮಾಡಬೇಕಾಗಿದೆ. ನಾಳೆ ನಾನು ಕಾಲೇಜಿಗೆ ಭೇಟಿ ನೀಡಿ ಆಡಳಿತ ಮಂಡಳಿಯ ಜೊತೆ ಮಾತನಾಡಬೇಕಾಗಿದೆ. ಆ ಬಳಿಕ ಘಟನೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯ ಎಂದು ಹೇಳಿದ್ದಾರೆ.
ಈ ಬಗ್ಗೆ ಫೇಕ್ ವಿಡಿಯೋಗಳು ಹರಿದಾಡುತ್ತಿವೆ. ಹರಿದಾಡುತ್ತಿರುವ ಈ ವಿಡಿಯೋಗಳು ಯಾವುದು ಕೂಡ ಸತ್ಯವಲ್ಲ. ಇವರಿಗೆ ಯಾವುದೇ ವಿಡಿಯೋ ಸಾಕ್ಷ್ಯ ಲಭ್ಯವಾಗಿಲ್ಲ. ವಿದ್ಯಾರ್ಥಿನಿಯರ ಮೊಬೈಲ್ ನಲ್ಲಿ ಯಾವುದೇ ವಿಡಿಯೋ ಕಂಡು ಬಂದಿಲ್ಲ.ಮಹಿಳಾ ಆಯೋಗ ಮತ್ತು ಪೊಲೀಸರು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಎಳೆಯ ಮನಸ್ಸುಗಳು ಒಳಗೊಂಡಿವೆ. ಸರಿಯಾದ ಹಾದಿಯಲ್ಲಿ ಪ್ರಕರಣದ ತನಿಖೆ ಆಗಬೇಕು.ತನಿಖೆಗೆ ಮೊದಲೇ ಯಾವುದೇ ತೀರ್ಮಾನಕ್ಕೆ ಬರುವುದು ಬೇಡ ಎಂದು ಹೇಳಿದ್ದಾರೆ.
ಪ್ರಕರಣದ ತನಿಖೆಯಲ್ಲಿ ವಿಳಂಬವಾದರೆ ಮಹಿಳಾ ಆಯೋಗ ಕ್ರಮ ಕೈಗೊಳ್ಳುತ್ತದೆ.ಸದ್ಯ ನಾವು ಸುಮೋಟೋ ಪ್ರಕರಣ ದಾಖಲಿಸಲು ನಿರ್ಧರಿಸಿಲ್ಲ. ಮಾಹಿತಿ ಸಂಗ್ರಹದ ಬಳಿಕ ನಿರ್ಧಾರ ತಿಳಿಸುತ್ತೇವೆ ಎಂದು ಖುಷ್ಬೂ ಹೇಳಿದ್ದಾರೆ.