ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುರುವಾರ ಭೇಟಿ ಮಾಡಿ ಮಾತುಕತೆ ನಡೆಸಿದರು.
ದೆಹಲಿ ಸಂಸತ್ ಭವನಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಅವರು ಪ್ರಧಾನಿಯವರನ್ನು ಭೇಟಿ ಮಾಡಿ ಮೋದಿಯವರಿಗೆ ಗಂಧದ ಹಾರ ಹಾಕಿ, ಮೈಸೂರು ಪೇಟ ಧರಿಸಿ, ಅಂಬಾರಿ ಕೊಟ್ಟು ಸನ್ಮಾನಿಸಿದರು. ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಸಿದ್ಧರಾಮಯ್ಯ ಪ್ರಥಮ ಬಾರಿಗೆ ಪ್ರಧಾನಿಯವರನ್ನು ಭೇಟಿ ಮಾಡಿದರು.
ವಿವಿಧ ಯೋಜನೆಗಳಡಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬಾಕಿ ಅನುದಾನ ಬಿಡುಗಡೆ ಕುರಿತು ಮೋದಿಯವರ ಬಳಿ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಬಳಿಕ ದೆಹಲಿಗೆ ಭೇಟಿ ನೀಡಿದ ಅವರು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನೂ ಭೇಟಿ ಮಾಡಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ರಾಜ್ಯದ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳೊಂದಿಗೆ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಉಪಸ್ಥಿತರಿದ್ದರು.