ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡು ಜೆಡಿಎಸ್ ಸೇರಿ ಕಣಕ್ಕಿಳಿದಿದ್ದ ಆಯನೂರು ಮಂಜುನಾಥ್ “ಕೈ” ಸೇರಲು ತೀರ್ಮಾನಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿಜೆಪಿಯ ಬಿ.ವೈ.ವಿಜಯೇಂದ್ರಗೆ ತೀವ್ರ ಸ್ಪರ್ಧೆ ಒಡ್ಡಿದ ನಾಗರಾಜ್ ಗೌಡ ಮತ್ತು ಯಶವಂತಪುರ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅವರ ಬೆಂಬಲಿಗರೂ ಕಾಂಗ್ರೆಸ್ ಸೇರಲಿದ್ದಾರೆ.
ಈ ಮೂಲಕ ವಿಧಾನಸಭೆ ಚುನಾವಣೆಯ ನಂತರ ಲೋಕಸಭೆ ಚುನಾವಣೆ ಮೇಲೆ ಕಣ್ಣಿಟ್ಟು ಮೊದಲ ಹಂತದ “ಆಪರೇಷನ್ ಹಸ್ತ”ಕ್ಕೆ ಚಾಲನೆ ನೀಡಿದಂತಾಗುತ್ತದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭಾನುವಾರ ಭೇಟಿ ಮಾಡಿದ ಆಯನೂರು ಮಾತುಕತೆ ನಡೆಸಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ಗೆ ಆಯನೂರು ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ.