ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಪದವಿ ಪ್ರಧಾನ ಕಾರ್ಯಕ್ರಮ “ಸಮಾವರ್ತನ” ಸಮಾರಂಭ ಆ.26 ಶನಿವಾರ ಇಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
2022-23ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವು ನಡೆಸಿದ ಇಂಜಿನಿಯರಿಂಗ್ ವಿಭಾಗಗಳ ಅಂತಿಮ ವರ್ಷದ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದವೀಧರರಾದ ಅರ್ಹ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಮಾಡಲಾಗುತ್ತದೆ.
ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ವಿಭಾಗದಲ್ಲಿ 4ನೇ ರ್‍ಯಾಂಕ್ ಗಳಿಸಿರುವ ಜಾಗೃತಿ.ಜೆ.ನಾಯಕ್ ಹಾಗೂ ಏಳನೇ ರ್‍ಯಾಂಕ್ ಗಳಿಸಿರುವ ದಿವ್ಯಶ್ರೀ.ಎಸ್ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಗುವುದು.
ಪ್ರತಿ ವಿಭಾಗದಲ್ಲಿ ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸುವ ಕಾರ್ಯಕ್ರಮವೂ ನಡೆಯುತ್ತದೆ.
ಅಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ಈ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಹಾಗೂ ಸ್ವರ್ಣೋದ್ಯಮಿ ಬಲರಾಮ ಆಚಾರ್ಯ.ಜಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ವಿಭಾಗ ಮುಖ್ಯಸ್ಥರು ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ ಕೆ. ತಿಳಿಸಿದ್ದಾರೆ.
























