ಪುತ್ತೂರು: ತಂತ್ರಜ್ಞಾನ ಎಷ್ಟು ಮುಂದುವರಿದರೂ ಕಂಪೆನಿಗಳು ಬಯಸುವ ರೀತಿಯಲ್ಲಿ ನುರಿತ ತಂತ್ರಜ್ಞರು ಸಿಗುತ್ತಿಲ್ಲ ಇದಕ್ಕೆ ಶಿಕ್ಷಣ ವ್ಯವಸ್ಥೆಯ ಪಠ್ಯಕ್ರಮ ಹಾಗೂ ಕಂಪೆನಿಯ ಆವಶ್ಯಕತೆಗಳ ಮಧ್ಯೆ ಇರುವ ಅಂತರವೇ ಕಾರಣ ಎಂದು ಕಾಕುಂಜೆ ಸಾಫ್ಟ್‌ವೇರ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗೋಪಾಲಕೃಷ್ಣ ಭಟ್ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ತರಬೇತಿ ಮತ್ತು ನೇಮಕಾತಿ ವಿಭಾಗದ ಆಶ್ರಯದಲ್ಲಿ ನಡೆದ ಕಂಪೆನಿ ಕನೆಕ್ಟ್-2023ಕ್ಕೆ ಚಾಲನೆ ನೀಡಿ ಮಾತಾಡಿದರು.
ಶಿಕ್ಷಣ ಸಂಸ್ಥೆಗಳ ಪಠ್ಯಕ್ರಮ ಹಾಗೂ ಕಂಪೆನಿಗಳ ಮಟ್ಟಕ್ಕೂ ಅಗಾಧ ಅಂತರವಿದೆ. ಇದರಿಂದ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಯೊಬ್ಬ ಕಾರ್ಪೋರೇಟ್ ಜಗತ್ತಿಗೆ ಪಾದಾರ್ಪಣೆ ಮಾಡುವಲ್ಲಿ ತೊಂದರೆಯನ್ನು ಅನುಭವಿಸಬಹುದು. ಕಾರ್ಪೋರೇಟ್ ಸಂಸ್ಥೆಗಳು ಬಯಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಿದ್ದಗೊಳಿಸುವ ನಿಟ್ಟಿನಲ್ಲಿ ಸಹಕಾರವನ್ನು ನೀಡುವುದಕ್ಕೆ ಕಂಪೆನಿಗಳು ಮುಂದೆ ಬರಬೇಕು ಎಂದರು. ಕಾಲೇಜುಗಳು ಕಂಪೆನಿಗಳೊಂದಿಗೆ ಒಪ್ಪಂದಗಳನ್ನು ಮಾಡಿಕೊಳ್ಳುವುದರಿಂದ ಉಪನ್ಯಾಸಕರಿಗೆ ವಿಶೇಷ ತರಬೇತಿ, ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್, ಪ್ರಾಜೆಕ್ಟ್ ಮುಂತಾದ ವಿಷಯಗಳಿಗೆ ತುಂಬಾ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಮಾತನಾಡಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಅಸಾಧಾರಣ ಪ್ರತಿಭೆಯನ್ನು ಹೊಂದಿದ್ದರೂ ಅದನ್ನು ವ್ಯಕ್ತಪಡಿಸುವಲ್ಲಿ ಹಿಂದುಳಿಯುತ್ತಾರೆ ಇದಕ್ಕಾಗಿ ಕಾಲೇಜು ಅನೇಕ ತರಬೇತಿ ಕಾರ್ಯಕ್ರಮಗಳನ್ನು ನಡೆಸುತ್ತದೆ ಎಂದರು. ಮುಂದಿನ ದಿನಗಳಲ್ಲಿ ಯಾವುದಾದರೂ ಕಂಪೆನಿಗಳು ಸ್ಟಾರ್ಟ್‌ಅಪ್‌ಗಳನ್ನು ಪ್ರಾರಂಭಿಸುವುದಾದರೆ ಅಥವಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವುದಾದರೆ ಕಾಲೇಜು ಅದಕ್ಕೆ ಸ್ಥಳಾವಕಾಶ ಹಾಗೂ ಮೂಲ ಸೌಕರ್ಯವನ್ನು ಒದಗಿಸುವುದಕ್ಕೆ ಸಿದ್ದವಿದೆ ಎಂದು ಹೇಳಿದರು.
ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿವಿಧ ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದರು. ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ಸ್ವಾಗತಿಸಿ ಪ್ರಸ್ತಾವನೆಗೈದರು. ತರಬೇತಿ ಮತ್ತು ನೇಮಕಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ವಂದಿಸಿದರು. ಎಂಸಿಎ ವಿಭಾಗದ ಪ್ರೊ.ನೀಮಾ ಕಾರ್ಯಕ್ರಮ ನಿರ್ವಹಿಸಿದರು.