ಬೆಂಗಳೂರು: ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹಾಗೂ ಅಮಿತ್ ಶಾ ಅವರ ನಡುವೆ ಮಾತುಕತೆ ನಡೆದಿದೆ ಎನ್ನಲಾದ ಬೆನ್ನಿಗೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಸಚಿವ ಸಿ.ಟಿ. ರವಿ ಅವರು ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ ಅಂತಿಮ ನಿರ್ಧಾರವನ್ನು ಬಿಜೆಪಿಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಅದರ ನಿರ್ದೇಶನವನ್ನು ಅನುಸರಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದಾರೆ.
ಮಾಧ್ಯಮ ವರದಿಗಳ ಮೂಲಕವೇ ಮೈತ್ರಿ ವಿಚಾರ ನನಗೆ ತಿಳಿಯಿತು. ಈ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಂಡರೆ, ಅದನ್ನು ಖಂಡಿತವಾಗಿಯೂ ಘೋಷಿಸಲಾಗುವುದು. ಆದರೆ, ಈಗ ನಾವು ಕಾಯಬೇಕಿದೆ. ಯಡಿಯೂರಪ್ಪ ಮತ್ತು ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿದ್ದನ್ನು ನೋಡಿದ್ದೇನೆ. ಮೈತ್ರಿ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ ಎಂದರು.
ಕೂಲಂಕಷವಾಗಿ ಚರ್ಚಿಸಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಈ ಮಧ್ಯೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲಲು ಏನು ಬೇಕೋ ಅದನ್ನು ಮಾಡುತ್ತಿದ್ದೇವೆ. ಅಂತಿಮ ನಿರ್ಧಾರವನ್ನು ಹಿರಿಯ ನಾಯಕರಿಗೆ ಬಿಡಲಾಗಿದೆ ಎಂದರು.
ಮೈತ್ರಿಯಿಂದ ಬಿಜೆಪಿಗೆ ಲಾಭವಾಗುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ರವಿ, ಕೆಲವು ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು. ಪ್ರತಿಪಕ್ಷ ನಾಯಕರ ನೇಮಕ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಹೈಕಮಾಂಡ್ ನಿಜವಾದ ಕಾರಣಕ್ಕಾಗಿ ನಿರ್ಧಾರ ತೆಗೆದುಕೊಳ್ಳಲು ವಿಳಂಬ ಮಾಡಿದೆ ಎಂದು ಹೇಳಿದರು.