ಬಿಳಿನೆಲೆ: ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ವ್ಯಸನಗಳಿಗೆ ಬಲಿಯಾಗಿ ತಮ್ಮ ಸುಂದರ ಜೀವಿತಾವಧಿಯನ್ನು ಕೊನೆಗೊಳಿಸುತ್ತಿರುವುದು ಕಂಡು ಬರುತ್ತಿದೆ. ಶೈಕ್ಷಣಿಕ ಸಾಧನೆಗಳನ್ನು ಮಾಡಬೇಕಾದ ವಿದ್ಯಾರ್ಥಿಗಳು ಮಾದಕ ದ್ರವ್ಯಗಳ ಸೇವನೆ, ಧೂಮಪಾನ ಮುಂತಾದ ಚಟಗಳಿಗೆ ದಾಸರಾಗುತ್ತಿರುವುದು ದುರಂತದ ವಿಚಾರ ಎಂದು ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ನಿಕಟಪೂರ್ವ ವಲಯಾಧ್ಯಕ್ಷ ಗಣೇಶ್ ಕೈಕುರೆ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಿಳಿನೆಲೆ ವಲಯದ ಆಶ್ರಯದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆಯಲ್ಲಿ ನಡೆದ ‘ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಕಲಿಕೆಯ ಕಡೆ ಹೆಚ್ಚಿನ ಗಮನ ಹರಿಸಿ ವ್ಯಸನಗಳಿಂದ ದೂರವಿದ್ದು, ಸುಂದರ ಬದುಕನ್ನು ರೂಪಿಸಿಕೊಳ್ಳಬೇಕಾದುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಆಡಳಿತ ಮಂಡಳಿ ಕಾರ್ಯದರ್ಶಿ ಕೃಷ್ಣ ಶರ್ಮ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಸಮಿತಿ ಸದಸ್ಯ ಗೋಪಾಲಕೃಷ್ಣ ಬಿ. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಬಿಳಿನೆಲೆ ಗ್ರಾಮ ಸಮಿತಿಯ ಸದಸ್ಯೆ ಶಾರದಾ, ಗೋಪಾಲಕೃಷ್ಣ ಪ್ರೌಢಶಾಲೆಯ ಮುಖ್ಯಶಿಕ್ಷಕ ಸತ್ಯ ಶಂಕರ ಭಟ್ ಎಂ, ಎಸ್ .ಡಿ .ಎಂ.ಸಿ. ಅಧ್ಯಕ್ಷ ಲಕ್ಷ್ಮಣ ಸಣ್ಣಾರ, ಬಿಳಿನೆಲೆ ಒಕ್ಕೂಟದ ಅಧ್ಯಕ್ಷ ರಾಜೇಶ್ ಒಗ್ಗು, ವೇದವ್ಯಾಸ ವಿದ್ಯಾಲಯದ ಮುಖ್ಯಶಿಕ್ಷಕ ಪ್ರಶಾಂತ್ ಬಿ ಮುಖ್ಯ ಅತಿಥಿಗಳಾಗಿದ್ದರು. ಸೇವಾ ಪ್ರತಿನಿಧಿ ಸತೀಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಅಧ್ಯಾಪಕರಾದ ದಿನೇಶ್ ಕುಂದರ್ ವಂದಿಸಿ, ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು.