ಪುತ್ತೂರು: ಕಡಲ ತಡಿಯ ಭಾರ್ಗವ ಡಾ. ಕೋಟ ಶಿವರಾಮ ಕಾರಂತರ ಜನ್ಮದಿನೋತ್ಸವ ಮತ್ತು ಡಾ. ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿ ಪ್ರದಾನ ಸಮಾರಂಭ ಅ. 10ರಂದು ಪರ್ಲಡ್ಕದ ಬಾಲವನದಲ್ಲಿ ನಡೆಯಲಿದೆ ಎಂದು ಪುತ್ತೂರು ಸಹಾಯಕ ಆಯುಕ್ತ, ಬಾಲವನ ಸಮಿತಿ ಅಧ್ಯಕ್ಷ ಗಿರೀಶ್ ನಂದನ್ ತಿಳಿಸಿದ್ದಾರೆ.
ಅವರು ಕಾರ್ಯಕ್ರಮದ ಪ್ರಯುಕ್ತ ಸಹಾಯಕ ಆಡಳಿತ ಸೌಧದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪುತ್ತೂರು ಡಾ. ಕೋಟ ಶಿವರಾಮ ಕಾರಂತರ ಬಾಲವನ ಹಾಗೂ ಸಹಾಯಕ ಆಯುಕ್ತರ ಕಚೇರಿ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದರು.
ಬೆಳಿಗ್ಗೆ 9.30ರಿಂದ ಆರ್ಯಭಟ ಪ್ರಶಸ್ತಿ ಪುರಸ್ಕೃತ ವಿದ್ವಾನ್ ದೀಪಕ್ ಕುಮಾರ್ ಮತ್ತು ಬಳಗದವರಿಂದ ವಿಶೇಷ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಬಳಿಕ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸುವರು. ವಿಧಾನಸಭೆ ಸಭಾಪತಿ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ಎಸ್. ತಂಗಡಗಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ವಿವರಿಸಿದರು.
ಮುಂಬೈ ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ. ತಾಳ್ತಜೆ ವಸಂತ ಕುಮಾರ್ ಅವರು ಕಾರಂತ ಸ್ಮರಣೆ ನಡೆಸಿಕೊಡುವರು. ಕರ್ನಾಟಕ ಲಲಿತ ಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಅಂತಾರಾಷ್ಟ್ರೀಯ ಮಟ್ಟದ ವರ್ಣ ಚಿತ್ರಕಲಾವಿದ ಕೆ. ಚಂದ್ರಕಾಂತ ಆಚಾರ್ಯ ಅವರಿಗೆ ದಿ| ಕುರುಂಜಿ ವೆಂಕಟರಮಣ ಗೌಡ ಅವರ ಶಾಶ್ವತ ಕೊಡುಗೆಯಲ್ಲಿ ಕೊಡ ಮಾಡುವ ಕೋಟ ಶಿವರಾಮ ಕಾರಂತರ ಬಾಲವನ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದು ಪ್ರಶಸ್ತಿ ಸಮಿತಿಯ ಸದಸ್ಯ, ಬೆಟ್ಟಂಪಾಡಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಅವರು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಈ ಸಂದರ್ಭದಲ್ಲಿ ಕಾರಂತರ ಒಡನಾಡಿ ಹಾಗೂ ಹಿರಿಯ ಸಾಹಿತಿ ಪಡಾರು ಮಹಾಬಲೇಶ್ವರ ಭಟ್ ಅವರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸಂಸದ ಡಿ. ವೀರೇಂದ್ರ ಹೆಗ್ಗಡೆ, ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ವೈ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಯು., ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕೋಟ ಶ್ರೀನಿವಾಸ ಪೂಜಾರಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಎಸ್.ಎಲ್ ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ್ ಭಂಡಾರಿ, ನಗರಸಭಾ ಸದಸ್ಯೆ ದೀಕ್ಷಾ ಪೈ, ಸುಳ್ಯ ಅಕಾಡೆಮಿ ಆಫ್ ಲಿಬಿರಲ್ ಎಜುಕೇಶನ್ ಅಧ್ಯಕ್ಷ ಡಾ.ಚಿದಾನಂದ ಕೆ.ವಿ, ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸಂಚಾಲಕ ಸವಣೂರು ಸೀತಾರಾಮ ರೈ, ಕ.ಸಾ.ಪ. ಪುತ್ತೂರು ಘಟಕದ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ, ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಹಾಯಕ ನಿರ್ದೇಶಕ ರಾಜೇಶ್ ಜಿ. ಭಾಗವಹಿಸಲಿದ್ದಾರೆ ಎಂದರು.
ಅಪರಾಹ್ನ ವೀರಮಂಗಲ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಂದ ತಾರನಾಥ ನಿರ್ದೇಶನದಲ್ಲಿ ಕೃಷ್ಣ ಲೀಲೆ ಯಕ್ಷಗಾನ, ಶ್ರೀ ರಾಮಕೃಷ್ಣ ಪ್ರೌಢಶಾಲಾ ಮಕ್ಕಳಿಂದ ಹಿರಿಯ ರಂಗ ಕಲಾವಿದ ಐ.ಕೆ. ಬೊಳುವಾರು ನಿರ್ದೇಶನದಲ್ಲಿ ಕಾರಂತಜ್ಜನಿಗೊಂದು ಪತ್ರ ಮಕ್ಕಳ ನಾಟಕ, ಸಂಜೆ ಬಾಲವನ ಮಹಿಳಾ ಯಕ್ಷ ಬಳಗದವರಿಂದ ಶಾಲಿನಿ ಅರುಣ್ ಶೆಟ್ಟಿ ಸಂಯೋಜನೆಯಲ್ಲಿ ವೀರಮಣಿ ಕಾಳಗ ಮಹಿಳಾ ಯಕ್ಷಗಾನ ನಡೆಯಲಿದೆ. ಬಾಲವನ ಪ್ರಶಸ್ತಿ ಪುರಸ್ಕೃತ ಕೆ. ಚಂದ್ರನಾಥ ಆಚಾರ್ಯ ಅವರ ಅಪೂರ್ವ ಕಲಾಕೃತಿಗಳ ಪ್ರದರ್ಶನ ಇದೆ ಎಂದು ಸಹಾಯಕ ಆಯುಕ್ತರು ತಿಳಿಸಿದರು.