ಪುತ್ತೂರು: ಸಮಾಜಮುಖಿ ಸೇವೆಗಳನ್ನು ಮಾಡುತ್ತಿರುವ ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನ ಸ್ವಯಂ ಸೇವಕರು ತಾಲೂಕಿನ ಎಲ್ಲಾ 220 ಬೂತ್ ಗಳಲ್ಲಿ ಸೇವೆಗೆ ಲಭ್ಯರಿದ್ದು, ಟ್ರಸ್ಟ್ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಲಾಗುತ್ತಿದೆ ಎಂದು ಟ್ರಸ್ಟ್ ಪ್ರವರ್ತಕ, ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ರೈ ಎಸ್ಟೇಟ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಹಾಗೂ ಮಂಗಳೂರು ಅತ್ತಾವರ ಕೆಎಂಸಿ ಆಸ್ಪತ್ರೆ ಆಶ್ರಯದಲ್ಲಿ ಟ್ರಸ್ಟ್ ಕಚೇರಿಯಲ್ಲಿ ಶನಿವಾರ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಪುತ್ತೂರಿನ ಜನತೆ ಈ ಬಾರಿಯ ಚುನಾವಣೆಯಲ್ಲಿ ನನಗೆ ಆಶೀರ್ವಾದ ಮಾಡಿದ್ದು, ನಿಮ್ಮ ಋಣ ನನ್ನ ಮೇಲಿದೆ. ಸರಕಾರದ ವಿವಿಧ ಯೋಜನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳನ್ನು ಎಲ್ಲರ ಮನೆ ಬಾಗಿಲಿಗೆ ತಲುಪಿಸಲಾಗುವುದು. ಟ್ರಸ್ಟ್ ಮೂಲಕ ಸಮಾಜಮುಖಿ ಸೇವೆಗಳನ್ನು ಮಾಡಲಾಗುತ್ತಿದ್ದು, ಜನರ ಆರೋಗ್ಯ ರಕ್ಷಣೆಗಾಗಿ 6 ತಿಂಗಳಿಗೊಮ್ಮೆ ವಿವಿಧ ಆಸ್ಪತ್ರೆಗಳ ಮೂಲಕ ಉಚಿತ ವೈದ್ಯಕೀಯ ಶಿಬಿರಗಳನ್ನು ನಡೆಸಲಾಗುವುದು ಎಂದು ಹೇಳಿದ ರೈ, ಅನಾರೋಗ್ಯದಲ್ಲಿರುವವರಿಗೆ ಆರೋಗ್ಯ ತಪಾಸಣೆ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ ವರ್ಷಕ್ಕೆ ಎರಡು ಬಾರಿ ಶಿಬಿರ ಏರ್ಪಡಿಸಲಾಗಿದೆ. ಇಲ್ಲಿ ಎಲ್ಲವನ್ನು ಉಚಿತವಾಗಿ ನೀಡಲಾಗುವುದು ಎಂದರು.
ಸರಕಾರದ ಯಾವುದೇ ಸೌಲಭ್ಯಗಳಿಲ್ಲದ ಬಿಪಿಎಸ್ ಫಲಾನುಭವಿಗಳ ಶಸ್ತ್ರ ಚಿಕಿತ್ಸೆ, ಮಕ್ಕಳ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆ ವೆಚ್ಚ 2 ಲಕ್ಷ ರೂಪಾಯಿಗಳಾದರೆ ಅಂತಹವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹಣಕಾಸಿನ ನೆರವು ನೀಡಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ ಮಾತನಾಡಿ, ನುಡಿದಂತೆ ನಡೆಯುತ್ತಿದ್ದೇವೆ ಎನ್ನುವ ರಾಜ್ಯ ಸರಕಾರದ ಆಶಯದಂತೆ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈಯವರು ಅದೇ ರೀತಿ ಮುನ್ನಡೆಯುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುತ್ತಿದ್ದಾರೆ. ಸರಕಾರದ ಯೋಜನೆಗಳನ್ನು ನಿರೀಕ್ಷೆಗೂ ಮೀರಿ ಜಾರಿಗೊಳಿಸುತ್ತಿದ್ದಾರೆ. ಒಟ್ಟಾರೆಯಾಗಿ ಬಡವರ ಕಾಳಜಿಯಿರುವ ಶಾಸಕರಾಗಿದ್ದಾರೆ ಎಂದರು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ರೈ, ಶಿಬಿರ ಏರ್ಪಡಿಸುವ ಮೂಲಕ ಪುತ್ತೂರು ಶಾಸಕರು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಟ್ರಸ್ಟ್ ಮೂಲಕ ಇನ್ನಷ್ಟು ಜನೋಪಯೋಗಿ ಕೆಲಸವಾಗಲಿ ಎಂದರು.
ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಮಾತನಾಡಿ, ಶಾಸಕ ಅಶೋಕ್ ಕುಮಾರ್ ರೈಯವರ ನೇತೃತ್ವದಲ್ಲಿ ನಡೆಯುವ ಟ್ರಸ್ಟ್ ನಲ್ಲಿ ಎಲ್ಲಾ ಆಯಾಮಗಳಲ್ಲೂ ಸೇವೆ ನೀಡಲಾಗುತ್ತಿದೆ. ಸಾಮಾಜಿಕ ಸ್ವಾಸ್ಥ್ಯ ಕಾಪಾಡುವ ಕಾರ್ಯ ಟ್ರಸ್ಟ್ ಮೂಲಕ ನಡೆಯುತ್ತಿದೆ ಎಂದರು.
ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಮನಮೋಹನ್ ಮಾತನಾಡಿದರು. ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ, ಟ್ರಸ್ಟ್ನ ಸಂಯೋಜಕ ನಿಹಾಲ್ ಶೆಟ್ಟಿ ಉಪಸ್ಥಿತರಿದ್ದರು.
ಟ್ರಸ್ಟ್ ಕಾರ್ಯಾದ್ಯಕ್ಷ ಸುದೇಶ್ ಶೆಟ್ಟಿ ಸ್ವಾಗತಿಸಿ, ಗೌರವ ಸಲಹೆಗಾರ ಮಹಮ್ಮದ್ ಬಡಗನ್ನೂರು ಕಾರ್ಯಕ್ರಮ ನಿರೂಪಿಸಿದರು. ಯೋಗೀಶ್ ಸಾಮಾನಿ ವಂದಿಸಿದರು.
ಶಿಬಿರದಲ್ಲಿ ಎಲುಬು ಮತ್ತು ಕೀಲು, ಗ್ಯಾಸ್ಟೋಎಂಟರಾಲಜಿ, ಮೂತ್ರಶಾಸ್ತ್ರ, ಕಣ್ಣಿನ, ಇಸಿಜಿ, ಹೃದಯ ರೋಗ, ಸಾಮಾನ್ಯ ರೋಗಗಳಿಗೆ ಪ್ರತ್ಯೇಕ ಚಿಕಿತ್ಸಾ ಕೊಠಡಿಗಳು ಮೂಲಕ ಚಿಕಿತ್ಸೆ ಸೌಲಭ್ಯ ಕಲ್ಪಿಸಲಾಗಿತ್ತು. ಕೆಎಂಸಿ ಆಸ್ಪತೆಯ ತಜ್ಞ ವೈದ್ಯರು ತಪಾಸಣೆ ನಡೆಸಿಕೊಟ್ಟರು. ಬಿ.ಪಿ, ಮಧುಮೇಹ ತಪಾಸಣೆ, ಇಸಿಜಿ, ಔಷಧ ಹಾಗೂ ಓದುವ ಕನ್ನಡಕಗಳನ್ನು ಉಚಿತವಾಗಿ ವಿತರಿಸಲಾಯಿತು. ಜೊತೆಗೆ ನಗರ ಪ್ರಾಥಮಿಕ ವಿಭಾಗದಿಂದ ಆಭಾ ಕಾರ್ಡ್ ನೋಂದಣಿಯ ಸೌಲಭ್ಯವನ್ನು ಕಲ್ಪಿಸಲಾಗಿತ್ತು.