ಪುತ್ತೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸವಣೂರು ಹಾಗೂ ಉಪ್ಪಿನಂಗಡಿ ಗ್ರಾ.ಪಂ.ಗೆ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಮಾಡಿದರು.
ಕೋಟತಟ್ಟುವಿನ ಡಾ. ಶಿವರಾಮ ಕಾರಂತ ಥೀಂ ಪಾರ್ಕಿನಲ್ಲಿ ನಡೆದ ಸಮಾರಂಭದಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗಾಂಧಿ ಗ್ರಾಮ ಪ್ರಶಸ್ತಿ ಸ್ವೀಕರಿಸಿದ 9 ಗ್ರಾಮ ಪಂಚಾಯತುಗಳಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಕಾರಂತ ಟ್ರಸ್ಟ್, ಕಾರಂತ ಹುಟ್ಟೂರು ಪ್ರಶಸ್ತಿ ಪ್ರತಿಷ್ಠಾನದ ಸಂಯುಕ್ತ ಆಶ್ರಯದಲ್ಲಿ ಕಾರಂತೋತ್ಸವದಲ್ಲಿ ಕಾರಂತ ಹುಟ್ಟೂರು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಡಾ.ವಿದ್ಯಾಭೂಷಣ, ಶಾಸಕರಾದ ಗುರುರಾಜ್ ಗಂಟಿಹೊಳೆ, ಯಶಪಾಲ್ ಎ. ಸುವರ್ಣ ಉಡುಪಿ, ಗುರ್ಮೆ ಸುರೇಶ್ ಶೆಟ್ಟಿ ಕಾಪು, ಕೋಟತಟ್ಟು ಗ್ರಾ.ಪಂ. ಅಧ್ಯಕ್ಷ ಸತೀಶ್ ಕುಂದರ್, ಪ್ರಶಸ್ತಿ ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ, ಕೋಟ ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಉಪಸ್ಥಿತರಿದ್ದರು. ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿ, ನರೇಂದ್ರ ಕೋಟ ಕಾರ್ಯಕ್ರಮ ನಿರೂಪಿಸಿದರು.
























