ಪುತ್ತೂರು: ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ಪರಿಹರಿಸಲಾಗಿದೆ. ಮಾತ್ರವಲ್ಲದೆ ಶಾಲೆಗಳಿಗೆ ವಿಷಯವಾರು ಶಿಕ್ಷಕರ ನೇಮಕಾತಿಯೂ ನಡೆದಿದ್ದು ಗುಣಮಟ್ಡದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಅವರು ಬೆಟ್ಟಂಪಾಡಿ ಗ್ರಾಮದ ಕಕ್ಕೂರು ಸರಕಾರಿ ಹಿಪ್ರಾ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ‘ಸೃಜನ ದರ್ಶನ’ ಮಕ್ಕಳ ಸಾಂಸ್ಕೃತಿಕ ಹಬ್ಬವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.
ಶಾಲೆಯಲ್ಲಿ ಶಿಕ್ಷಕರ ನಡುವೆ ಹೊಂದಾಣಿಕೆ ಇರಬೇಕಾಗಿದೆ. ಶಿಕ್ಷಕರೊಳಗೆ ಪರಸ್ಪರ ಹೊಂದಾಣಿಕೆಯ ಕೊರತೆ ಇದ್ದಲ್ಲಿಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಹೊಂದಾಣಿಕೆಯಲ್ಲಿ ನಡೆದುಕೊಳ್ಳದ ಶಿಕ್ಷಕರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ ಅವರು, ಶಿಕ್ಷಣ ಗುಮಟ್ಟದಿಂದ ಇರಬೇಕಾದರೆ ಶಾಲೆಯಲ್ಲಿ ಉತ್ತಮ ವಾತಾವರಣ ಇರಬೇಕು. ಇದಕ್ಕೆ ಶಿಕ್ಷಕರು ಮತ್ತು ಪೋಷಕರು ಜೊತೆಯಾಗಿ ಕೆಲಸ ಮಾಡಬೇಕಾದ ಅಗತ್ಯವಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕರನ್ನು ಶಾಲಾ ವತಿಯಿಂದ ಗೌರವಿಸಲಾಯಿತು. ಮುಖ್ಯ ಅತಿಥಿಯಾಗಿ ಬೆಟ್ಟಂಪಾಡಿ ಗ್ರಾಪಂ ಸದಸ್ಯ ಮಹಾಲಿಂಗ ನಾಯ್ಕ ಹಾರೈಸಿದರು. ವೇದಿಕೆಯಲ್ಲಿ ಉದ್ಯಮಿ ಎಂ.ಮಹಮ್ಮದ್, ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಂಗನಾಥ ರೈ ಗುತ್ತು, ಕಾಂಗ್ರೆಸ್ ಮುಖಂಡ ಕೃಷ್ಣಪ್ರಸಾದ್ ಆಳ್ವ, ಪ್ರಮೋದ್ ಕುಮಾರ್ ರೈ ಗುತ್ತು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ರವಿಕಲಾ ಎನ್., ಸಮೂಹ ಸಂಪನ್ಮೂಲ ವ್ಯಕ್ತಿ ಪರಮೇಶ್ವರಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಯಪ್ರಕಾಶ್, ವಿದ್ಯಾರ್ಥಿ ನಾಯಕಿ ಆಯಿಷತ್ ಮುಸೀನ, ವಿದ್ಯಾ ಗಂಗೋತ್ರಿ ಟ್ರಸ್ಟ್ ಅಧ್ಯಕ್ಷ ಗಣಪತಿ ಭಟ್ ಕಕ್ಕೂರು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕಿ ಜ್ಯೋತಿ ಕೆ. ಸ್ವಾಗತಿಸಿದರು. ಶಿಕ್ಷಕ ನಾಗೇಶ್ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು.