ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಸಹಕಾರ ಸಂಘಗಳು ಹಾಗೂ ನವೋದಯ ಸ್ವಸಹಾಯ ಸಂಘಗಳ ಸದಸ್ಯರುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟ ಡಿ.30 ರಂದು ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ತಿಳಿಸಿದ್ದಾರೆ.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರೀಡಾಕೂಟ ಮಹಿಳೆಯರಿಗೆ ಹಾಗೂ ಪುರುಷರಿಗೆ ನಡೆಯಲಿದ್ದು, ಹಗ್ಗಜಗ್ಗಾಟ, 100 ಮೀ. ಓಟ ಹಾಗೂ ಗುಂಡು ಎಸೆತ ಪಂದ್ಯಾಟಗಳು ನಡೆಯಲಿವೆ. ನವೋದಯ ಸ್ವಸಹಾಯ ಸಂಘದ ಸದಸ್ಯರು, ಕೇಂದ್ರ ಸಹಕಾರಿ ಬ್ಯಾಂಕ್ ಸಿಬ್ಬಂದಿ ವರ್ಗ, ಕೃಷಿ ಪತ್ತಿನ ಸೇವಾ ಸಹಕಾರಿ ಬ್ಯಾಂಕ್ ನ ಸಿಬ್ಬಂದಿಗಳು ಹಾಗೂ ಸದಸ್ಯರಿಗೆ, ನವೋದಯ ಸ್ವಸಹಾಯ ಸಂಘದ ಪ್ರೇರಕರಿಗೆ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ವಿವಿಧ ತಾಲೂಕಿನಿಂದ ಕ್ರೀಡಾಳುಗಳು ಪಾಲ್ಗೊಳ್ಳಲಿದ್ದು, ಪ್ರತೀ ತಾಲೂಕಿನಿಂದ ಹಗ್ಗಜಗ್ಗಾಟಕ್ಕೆ ಮೂರು ತಂಡಗಳನ್ನು ನಿಗದಿಪಡಿಸಲಾಗಿದೆ. 100 ಮೀ. ಹಾಗೂ ಗುಂಡೆಸೆತ ಸ್ಪರ್ಧೆಯಲ್ಲಿ ಭಾಗವಹಿಸುವಿಕೆಯಲ್ಲಿ ಮಿತಿ ಇಲ್ಲ ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ಸುಮಾರು 15 ಸಾವಿರ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದ್ದು, ಆಗಮಿಸುವ ಸ್ಪರ್ಧಾಳುಗಳಿಗೆ, ಸಾರ್ವಜನಿಕರಿಗೆ ವಾಹನ ಪಾರ್ಕಿಂಗ್ ವ್ಯವಸ್ಥೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಮಾಡಲಾಗಿದೆ. ಒಟ್ಟಾರೆಯಾಗಿ ಈ ಕ್ರೀಡಾಕೂಟ ಒಂದು ಜಾತ್ರೆ ಮಾದರಿಯಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಡಿ.30ರ ಬೆಳಿಗ್ಗೆ 9 ಗಂಟೆಗೆ ಕ್ರೀಡಾಕೂಟವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸುವರು. ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡುವರು. ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಕ್ರೀಡಾ ಜ್ಯೋತಿ ಪ್ರಜ್ವಲನೆ ಮಾಡುವರು. ಸಂಸದ ನಳಿನ್ ಕುಮಾರ್ ಕಟೀಲ್ ಮೆರವಣಿಗೆಗೆ ಚಾಲನೆ ನೀಡುವರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಮೆನೆಜಿಂಗ್ ಟ್ರಸ್ಟಿ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.
ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಪ್ರಶಸ್ತಿ ವಿತರಣೆ ಮಾಡುವರು. ಮುಖ್ಯ ಅತಿಥಿಗಳಾಗಿ ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಕರಾವಳಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ನಗರಸಭೆ ನಿಕಟಪೂರ್ವ ಅಧ್ಯಕ್ಷ ಜೀವಂಧರ್ ಜೈನ್, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಎಸ್.ಬಿ.ಜಯರಾಮ ರೈ, ಬ್ಯಾಂಕ್ ಮಾರಾಟ ಅಧಿಕಾರಿ ಆದರ್ಶ, ವ್ಯವಸ್ಥಾಪಕ ಹರೀಶ್ ರೈ ಉಪಸ್ಥಿತರಿದ್ದರು.