ಪುತ್ತೂರು: ಕನಸು ಪ್ರತಿಯೊಬ್ಬರಲ್ಲೂ ಇರುತ್ತದೆ. ಆದರೆ ಅದನ್ನು ಸಾಕಾರಗೊಳಿಸುವ ದಾರಿಯನ್ನು ನಾವೇ ಕಂಡುಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಜೀವನದ ಗುರಿಯನ್ನು ತಲುಪುವುದರ ಬಗ್ಗೆ ಸದಾ ಜಾಗೃತರಾಗಬೇಕು ಎಂದು ಯುವ ಉದ್ಯಮಿ ಹಾಗೂ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನ ಕೋಶಾಧಿಕಾರಿ ನರಸಿಂಹ ಪೈ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಸಾಮಾಜಿಕ, ಸಾಂಸ್ಕೃತಿಕ ಮತ್ತು ವೈಜ್ಞಾನಿಕ ಕನಸುಗಳಿಗೆ ವೇದಿಕೆಯನ್ನು ನೀಡುವ ಕನಸುಗಳು-2023 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅವಕಾಶ ಎಲ್ಲರಿಗೂ ಸಿಗುವುದಿಲ್ಲ, ಸಿಕ್ಕಿರುವ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು. ಕನಸನ್ನು ನನಸಾಗಿಸಲು ನಿರಂತರ ಪ್ರಯತ್ನ ಮುಖ್ಯ ಎಂದು ಹೇಳಿದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಶೈಕ್ಷಣಿಕವಾಗಿ ಪ್ರಬಲರಾಗಬೇಕು. ಆಗ ಮಾತ್ರ ಶಿಕ್ಷಣ ಸಂಸ್ಥೆಯು ಸಾರ್ಥಕತೆಯನ್ನು ಕಾಣಲು ಸಾಧ್ಯ. ಇಂದು ಈ ಶಿಕ್ಷಣ ಸಂಸ್ಥೆ ಸಮಾಜದಲ್ಲಿ ಒಳ್ಳೆಯ ಹೆಸರಿನಿಂದ ಗುರುತಿಸಲ್ಪಡುತ್ತಿದೆ ಎಂದರೆ ಅದಕ್ಕೆ ಕಾರಣ ವಿದ್ಯಾರ್ಥಿಗಳಿಗೆ ಇಲ್ಲಿ ನೀಡುತ್ತಿರುವ ಸಂಸ್ಕಾರ ಮತ್ತು ಸಂಸ್ಕೃತಿ ಎಂದರು.
ವೇದಿಕೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವೀಂದ್ರ ಪಿ., ಕೋಶಾಧಿಕಾರಿ ಸಚಿನ್ ಶೆಣೈ ಕೆ, ಸದಸ್ಯೆ ಇಂದಿರಾ ಬಿ ಕೆ, ಉಪಪ್ರಾಂಶುಪಾಲ ದೇವಿಚರಣ್ ರೈ ಉಪಸ್ಥಿತರಿದ್ದರು. ಕಾರ್ಯಕ್ರಮ ಮುಖ್ಯ ಸಂಯೋಜಕಿ ಹರ್ಷಿತಾ ಪಿ ಪ್ರಾಸ್ತಾವಿಕವಾನಿ ಮಾತನಾಡಿ, ಸ್ವಾಗತಿಸಿದರು. ಉಪನ್ಯಾಸಕಿ ದಯಾಮಣಿ ವಂದಿಸಿದರು.
ಪ್ರಾಧ್ಯಾಪಕಿ ಅನುಪಮ ಶೇಟ್ ಕಾರ್ಯಕ್ರಮ ನಿರೂಪಿಸಿದರು.
ವೈವಿಧ್ಯಮಯ ಸ್ಪರ್ಧೆಗಳು:
ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಎರಡು ದಿವಸದ ಈ ಕಾರ್ಯಕ್ರಮದಲ್ಲಿ ಸಾಮಾನ್ಯ ರಸಪ್ರಶ್ನೆ, ವಿಜ್ಞಾನ ಮಾದರಿ, ಜಾಹೀರಾತು, ಚರ್ಚಾ ಸ್ಪರ್ಧೆ, ಚಿತ್ರಕಲೆ, ಪ್ರಾಕೃತಿಕ ರಂಗೋಲಿ, ಕನ್ನಡ ಕವನ ರಚನೆ ಹಾಗೂ ವಾಚನ, ಯುವ ಪತ್ರಕರ್ತ, ದೃಶ್ಯ- ಕಾವ್ಯ, ಯುವ ಉದ್ಯಮಿ, ಯಕ್ಷಗಾನ ಭಾಗವತಿಕೆ, ಕಲರವ- ಸಾಂಸ್ಕೃತಿಕ ವೈವಿಧ್ಯ, ಮುಖವರ್ಣಿಕೆ, ವಿಡಿಯೋ ಸಂಕಲನ, ನಿಧಿ ಶೋಧ ವಿವಿಧ ಸ್ಪರ್ಧೆಗಳು ನಡೆದವು. ಸುಮಾರು 35 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಮತ್ತು ಅಧ್ಯಾಪಕ ವೃಂದದವರು ಸೇರಿದಂತೆ ಸುಮಾರು 500 ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.