ಪುತ್ತೂರು: ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ – ಬಾಲಕಿಯರ ಕ್ರೀಡಾಕೂಟಕ್ಕೆ ಶನಿವಾರ ಸಂಜೆ ದರ್ಬೆ ವೃತ್ತದಲ್ಲಿ ಸ್ವಾಗತಿಸಲಾಯಿತು.
ಶುಕ್ರವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಕ್ರೀಡಾಕೂಟದ ಜ್ಯೋತಿಗೆ ಚಾಲನೆ ನೀಡಿದ್ದು, ತಾಲೂಕಿನ ವಿವಿಧ ಪ್ರದೇಶಗಳಿಗೆ ಸಂಚರಿಸಿ ಇಂದು ದರ್ಬೆಗೆ ತಲುಪಿತು. ದರ್ಬೆಯಲ್ಲಿ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸಿ, ಬೃಹತ್ ಮೆರವಣಿಗೆಯಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣಕ್ಕೆ ತರಲಾಯಿತು.
ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಸವಣೂರು ಶಿಲ್ಪಿ ಸವಣೂರು ಸೀತಾರಾಮ ರೈ, ಜಿ.ಪಂ. ಮಾಜಿ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ಅರಿಯಡ್ಕ ಚಿಕ್ಕಪ್ಪ ನಾಯ್ಕ್, ಬಂಟರ ಸಂಘದ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ದಂಬೆಕ್ಕಾನ ಸದಾಶಿವ ರೈ, ಸಾಜ ರಾಧಾಕೃಷ್ಣ ಆಳ್ವ ಮೊದಲಾದವರು ಉಪಸ್ಥಿತರಿದ್ದರು. ಕ್ರೀಡಾಕೂಟದ ಕಾರ್ಯಾಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಸ್ವಾಗತಿಸಿದರು.
ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಉಪನಿರ್ದೇಶಕರ ಕಚೇರಿ ಮಂಗಳೂರು, ಪುತ್ತೂರು ಉಪವಿಭಾಗ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ನೇತೃತ್ವದಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.