ಪುತ್ತೂರು: ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಸಂಶೋಧಕ, ನಿವೃತ್ತ ಪ್ರಾಧ್ಯಾಪಕ ಡಾ.ಅಮೃತ ಸೋಮೇಶ್ವರ (88) ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಅನುವಾದಕ, ವಿಮರ್ಶಕ, ಜಾನಪದ ತಜ್ಞ, ಕವಿ, ಕಥೆಗಾರರಾಗಿದ್ದ ಅವರು, 1935 ರ ಸೆ.27ರಂದು ಕೋಟೆಕಾರು ಸಮೀಪ ಅಡ್ಯ ಎಂಬಲ್ಲಿ ಜನಿಸಿದ್ದರು.
ಕೇಟೆಕಾರಿನ ಸ್ಟೆಲ್ಲ ಮೇರಿಸ್ ಕಾನ್ವೆಂಟ್ ನಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು, ಅನಂತರ ಇಲ್ಲಿನ ಆನಂದಾಶ್ರಮದಲ್ಲಿ ಪ್ರೌಢಶಾಲೆ ವಿಧ್ಯಾಭ್ಯಾಸ ಮಾಡಿದರು. ಅಲೋಶಿಯಸ್ ಕಾಲೇಜಿನಲ್ಲಿ ಪದವಿ ಅಭ್ಯಾಸ ಮುಗಿಸಿ, ಖಾಸಗಿಯಾಗಿ ಓದಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಎಂ. ಎ. ಪದವಿ ಪಡೆದರು. ಆರಂಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಕನ್ನಡ ವಿಭಾಗದಲ್ಲಿ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದರು. ಅನಂತರ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಎರಡು ವರ್ಷ ಕೆಲಸ ಮಾಡಿದರು. 1967 ರಿಂದ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಕರ್ತವ್ಯವನ್ನು ನಿರ್ವಹಿಸಿ 1993 ರಲ್ಲಿ ನಿವ್ರತ್ತರಾದರು. ನಿವ್ರತ್ತಿಯ ನಂತರ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಕೆಲವು ಕಾಲ ಕಾರ್ಯನಿರ್ವಹಿಸಿದ್ದಾರೆ.
ಕನ್ನಡ ಸಂಘ, ಯಕ್ಷಗಾನ ಸಂಘ ಇಂತಹ ಕೂಟಗಳನ್ನು ಆರಂಭಿಸಿ ತುಳು ಭಾಷೆಯ ಬೆಳವಣಿಗೆಗಾಗಿ ಶ್ರಮಿಸಿರುವ ಅವರು ವಿದ್ಯಾರ್ಥಿಯಾಗಿದ್ದಾಗಲೇ ಸಾಹಿತ್ಯದಲ್ಲಿ ಆಸಕ್ತಿ ಹೊಂದಿದ್ದರು. ತುಳುನಾಡಿನ ಸಂಸ್ಕ್ರತಿ ಮತ್ತು ಕಲೆಯ ಬಗೆಗೆ ವಿಶೇಷ ಒಲವುಳ್ಳವರು. ಅವರ ಮೊದಲ ಕ್ರತಿ ‘ಎಲೆಗಿಳಿ’ ಎಂಬ ಸಣ್ಣಕತೆಗಳ ಸoಕಲನ 1957 ರಲ್ಲಿ ಪ್ರಕಟವಾಯಿತು. ರುದ್ರಶಿಲೆ ಸಾಕ್ಷಿ, ಕೆಂಪು ನೆನಪು, ವನಮಾಲೆ, ಭ್ರಮಣ ಉಪ್ಪು ಗಾಳಿ ಮೊದಲಾದ ಕವನ ಸಂಕಲನ, ತೀರದ ತೆರೆ ಕಾದಂಬರಿ, ಯಕ್ಷಗಾನ ಕೃತಿ ಸಂಪುಟ, ತುಳು ಪಾಡ್ದನದ ಕಥೆಗಳು, ಅವಿಲು, ತುಳು ಬದುಕು, ಯಕ್ಷಗಾನ ಹೆಜ್ಜೆಗುರುತು, ಭಗವತಿ ಆರಾಧನೆ, ಮೋಯ-ಮಲೆಯಾಳ ನಿಘಂಟು ಮೊದಲಾದ ಕೃತಿಗಳನ್ನು ಪ್ರಕಟಿಸಿದ್ದಾರೆ. ತುಳುವಿನಲ್ಲೂ ಬರೆಯಬಲ್ಲ ಅಮೃತರು ‘ತಂಬಿಲ’, ‘ರಂಗಿತ’ ಕವನ ಸಂಗ್ರಹ, ‘ಗೋಂದೋಲ್’, ‘ರಾಯ ರಾವುತೆ’ ಮೊದಲಾದ ನಾಟಕಗಳನ್ನು ಪ್ರಕಟಿಸಿದವರು. ಸಾಕಷ್ಟು ಧ್ವನಿಸುರುಳಿಗಳಿಗೆ ಸಾಹಿತ್ಯವನ್ನು ಒದಗಿಸಿದ ಹಿರಿಮೆ ಅವರದು.
ಸಂದ ಪ್ರಶಸ್ತಿಗಳು:
ಕರ್ನಾಟಕ ಸಾಹಿತ್ಯ ಅಕಾಡೆಮಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಹಾಗೂ ಯಕ್ಷಾನ ಅಕಾಡೆಮಿ ಪ್ರಶಸ್ತಿ, ತಲ್ಲೂರು ಕನಕಾ -ಅಣ್ಣಯ್ಯ ಶೆಟ್ಟಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಹಲಸಂಗಿ ಗೆಳೆಯರ ಪ್ರತಿಷ್ಠಾನ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿಯ 2016ನೇ ಸಾಲಿನ ‘ಭಾಷಾ ಸಮ್ಮಾನ್’ ಪ್ರಶಸ್ತಿ, ಕೀರಿಕ್ಕಾಡು ಪ್ರಶಸ್ತಿ, ರಾಷ್ಟ್ರಕವಿ ಗೋವಿಂದ ಪೈ ಸ್ಮಾರಕ ಪ್ರಶಸ್ತಿಗೆ ಭಾಜರಾಗಿದ್ದರು.