ಮಂಗಳೂರು: ಪ್ರಜಾಪ್ರಭುತ್ವ ದೇಶವಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಪ್ರತೀ ಚುನಾವಣೆ ಬಂದಾಗ ಹಲವಾರು ಸಮಸ್ಯೆಗಳು ಎದುರಾಗುತ್ತಿದ್ದು, ಎಲ್ಲಾ ಸವಾಲುಗಳನ್ನು ಎದುರಿಸಿ ಬಿಜೆಪಿ ಗೆಲುವು ಸಾಧಿಸಿದೆ. ಹಾಗೆಯೇ ಮುಂದಿನ ಲೋಕಸಭಾ ಚುನಾವಣೆಯಲ್ಲೂ ಬಿಜೆಪಿ ಗೆಲುವಿ ಸಾಧಿಸಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಪುತ್ತಿಲ ಪರಿವಾರ ಅಧಿಕೃತ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ಪ್ರತಿಕ್ರಿಯಿಸಿದ ಅವರು, ಪುತ್ತಿಲ ಪರಿವಾರ ಸ್ವತಂತ್ರ ಸಂಸ್ಥೆಯಾಗಿದ್ದು, ತೀರ್ಮಾನ ತೆಗೆದುಕೊಳ್ಳುವ ಸ್ವಾತಂತ್ರ್ಯ ಇದೆ. ಈಗಾಗಲೇ ಅವರ ಮನವೊಲಿಕೆಗೆ ಬಿಜೆಪಿ ಹಲವಾರು ಪ್ರಯತ್ನಗಳನ್ನು ಮಾಡಿದೆ ಎಂದ ಅವರು, ಬಿಜೆಪಿ ರಾಷ್ಟ್ರೀಯ ಪಕ್ಷವಾಗಿ ಬೆಳೆದಿದ್ದು, ರಾಮಮಂದಿರ ನಿರ್ಮಾಣದ ಬಳಿಕ ಹಿಂದುತ್ವ, ರಾಷ್ಟ್ರವಾದದ ಜತೆಗೆ ಅಭಿವೃದ್ಧಿ ವಿಚಾರದಲ್ಲಿ ಜನ ಒಗ್ಗಟ್ಟಾಗುತ್ತಾರೆ ಎಂಬ ವಿಶ್ವಾಸವಿದೆ. ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಪೂತಪೂರ್ವ ಜಯ ಸಾಧಿಸಲಿದೆ ಎಂದು ತಿಳಿಸಿದರು.
ನನಗೆ ಈ ಬಾರಿ ಸೀಟು ಕೊಡೋದು ರಾಷ್ಟ್ರೀಯ ನಾಯಕರ ತೀರ್ಮಾನ. ಆ ತೀರ್ಮಾನಕ್ಕೆ ಕಾರ್ಯಕರ್ತನಾಗಿ ಬದ್ಧನಾಗಿದ್ದೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ್ದಾರೆ.