ಪುತ್ತೂರು: ಮುಂದಿನ ಲೋಕಸಭಾ ಚುನಾವಣೆ ಸೇರಿದಂತೆ ದ.ಕ.ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಚುನಾವಣೆಗಳಲ್ಲಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಸ್ಪರ್ಧೆ ಮಾಡಲಿದ್ದು, ಕಾರ್ಯಕರ್ತರು, ಹಿತೈಷಿಗಳ, ಮತದಾರರ ನಿರ್ಧಾರದಂತೆ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾರ್ತ ತಿಳಿಸಿದ್ದಾರೆ.
ಪುತ್ತಿಲ ಪರಿವಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರವಾಗಿ ನಿಂತು 60 ಸಾವಿರಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಸಂಚಲನ ಮೂಡಿಸಿತ್ತು. ಬಳಿಕದ ದಿನಗಳಲ್ಲಿ ತನ್ನ ಕಾರ್ಯ ಚಟುವಟಿಕೆಗಳನ್ನು ಜಿಲ್ಲಾದ್ಯಂತ ವಿಸ್ತರಿಸಲಾಗಿತ್ತು. ಮುಂದಿನ ದಿನಗಳಲ್ಲಿ ತನ್ನ ಕಾರ್ಯಚಟುವಟಿಕೆಗಳನ್ನು ರಾಜ್ಯಾದ್ಯಂತ ವಿಸ್ತರಿಸುವ ಯೋಜನೆ ಇದೆ ಎಂದು ತಿಳಿಸಿದರು.
ಈಗಾಗಲೇ ಬಿಜೆಪಿ ಸೇರ್ಪಡೆ ಕುರಿತು ರಾಜ್ಯ, ಜಿಲ್ಲಾ ನಾಯಕರ ಜತೆ ಹಲವಾರು ಬಾರಿ ಚರ್ಚಿಸಲಾಗಿದೆ. ಆದರೂ ಮಾತೃಪಕ್ಷ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಈ ನಿಟ್ಟಿನಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ನಮ್ಮ ಅಚಲವಾದ ನಿರ್ಧಾರ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪುತ್ತಿಲ ಪರಿವಾರದ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಮಹೇಂದ್ರ ವರ್ಮ, ಶ್ರೀಕೃಷ್ಣ ಉಪಾಧ್ಯಾಯ ಉಪಸ್ಥಿತರಿದ್ದರು.