ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ.
ಕೇಜ್ರಿವಾಲ್ ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ ಅಡಿಯಲ್ಲಿ ದೆಹಲಿ ಮುಖ್ಯಮಂತ್ರಿಯ ಹೇಳಿಕೆಯನ್ನು ದಾಖಲಿಸಿಕೊಂಡು ಬಂಧನ ಮಾಡಿದೆ. ಅರವಿಂದ್ ಕೇಜ್ರಿವಾಲ್ ಅವರ ಕಾನೂನು ತಂಡವು ತತ್ ಕ್ಷಣವೇ ಈ ವಿಷಯದ ತುರ್ತು ವಿಚಾರಣೆಯನ್ನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದೆ.
ಅಬಕಾರಿ ನೀತಿ ಪ್ರಕರಣದಲ್ಲಿ ಇ.ಡಿ. ತನ್ನ ವಿರುದ್ಧ ಯಾವುದೇ ಬಲವಂತದ ಕ್ರಮಗೊಳ್ಳುವುದರ ವಿರುದ್ಧ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಆಲಿಸಿದ ದೆಹಲಿ ಹೈಕೋರ್ಟ್‌ನ ವಿಭಾಗೀಯ ಪೀಠ, “ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿ, ಈ ಹಂತದಲ್ಲಿ ಮಧ್ಯಂತರ ಪರಿಹಾರವನ್ನು ನೀಡಲು ನಾವು ಒಲವು ಹೊಂದಿಲ್ಲ ಎಂದು ಹೇಳಿದ ಬೆನ್ನಲ್ಲೇ ಈ ವಿದ್ಯಮಾನ ನಡೆದಿದೆ. ನಿವಾಸದ ಸುತ್ತ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಕೇಜ್ರಿವಾಲ್ ನಿವಾಸದ ಮುಂದೆ ಆಪ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಸದ ಹೊರಗೆ ರಾಪಿಡ್ ಆಕ್ಷನ್ ಫೋರ್ಸ್ (RAF) ಕೂಡ ಹಾಜರಿದೆ.