ಪುತ್ತೂರು: ಲೋಕಸಭಾ ಚುನಾವಣೆ ಅಂಗವಾಗಿ ಪುತ್ತೂರು ಬಿಜೆಪಿ ವತಿಯಿಂದ ಕಾರ್ಯಕರ್ತರ ಸಮಾವೇಶ ಏ.2ರಂದು ಬೈಪಾಸ್ ರಸ್ತೆಯ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ಚನಿಲ ತಿಮ್ಮಪ್ಪ ಶೆಟ್ಟಿ ತಿಳಿಸಿದ್ದಾರೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಿಜೆಪಿ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಪಾಲ್ಗೊಳ್ಳಲಿದ್ದಾರೆ. ಸಮಾವೇಶಕ್ಕೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಆಹ್ವಾನಿಸಲಾಗಿದ್ದು, ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.
ಸಮಾವೇಶದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದ 221 ಬೂತ್ ನ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರದ ಕಾರ್ಯಕರ್ತರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು ಮೂರು ಸಾವಿರಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.
ಈಗಾಗಲೇ 221 ಬೂತ್ ಗಳಲ್ಲಿ ಒಂದು ಸುತ್ತಿನ ಸಭೆ ನಡೆಸಲಾಗಿದ್ದು, ಎರಡನೇ ಸುತ್ತಿನ ಸಭೆ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಅವರು ಎರಡು ಬಾರಿ ಪುತ್ತೂರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಏ.2 ರಂದು ಮೂರನೇ ಬಾರಿಗೆ ಪುತ್ತೂರಿಗೆ ಆಗಮಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರದ ವಿವಿಧ ಯೋಜನೆಗಳನ್ನು ಪ್ರತೀ ಮನೆ ಮನೆಗೆ ಭೇಟಿ ನೀಡಿ ತಿಳಿಸುವ ಕಾರ್ಯ ಹಮ್ಮಿಕೊಳ್ಳಲಾಗುವುದು. ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿದೆ.
ಕೋವಿ ಠೇವಣಿ – ರಿಯಾಯಿತಿ ನೀಡುವಂತೆ ಮನವಿ :
ಮಾಜಿ ಶಾಸಕ ಸಂಜೀವ ಮಠಂದೂರು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿ, ಈಗಾಗಲೇ ಕೃಷಿಕರ ಕೋವಿ ಠೇವಣಿ ಇಡುವ ಕುರಿತು ರಿಯಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದ್ದು, ಚುನಾವಣಾಧಿಕಾರಿ ಆದೇಶ ನೀಡುವಂತೆ ತಿಳಿಸಲಾಗಿದೆ. ಪ್ರಸ್ತುತ ನಕ್ಸಲ್ ಹಾವಳಿಯೂ ಕಾಡುತ್ತಿದ್ದು, ಜತೆಗೆ ಕಾಡು ಪ್ರಾಣಿ ಮುಂತಾದವುಗಳನ್ನು ಸ್ವಯಂ ರಕ್ಷಣೆ ಪಡೆಯುವುದರ ಜತೆಗೆ ಕೃಷಿ ರಕ್ಷಣೆಯನ್ನು ಪರಿಗಣಿಸಿ ಠೇವಣಿಯಿಂದ ರಿಯಾಯಿತಿ ನೀಡಬೇಕೆಂದು ಒತ್ತಾಯಿಸಲಾಗಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಹ ಸಂಚಾಲಕ ಗೋಪಾಲಕೃಷ್ಣ ಹೇರಳೆ, ಬಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಕೃಷ್ಣ ಆಳ್ವ, ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ, ವಿಧಾನಸಭಾ ಕ್ಷೇತ್ರದ ಚುನಾವಣಾ ಉಸ್ತುವಾರಿ ಸುಲೋಚನಾ ಭಟ್, ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು.