ಪುತ್ತೂರು: ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪುತ್ತೂರಿನ ಜೈನ ಭವನದಲ್ಲಿ ಏ.9 ರಂದು ಬಿಜೆಪಿ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಸುಲೋಚನಾ ಜಿ.ಕೆ.ಭಟ್ ತಿಳಿಸಿದ್ದಾರೆ.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಈಗಾಗಲೇ ಪ್ರಧಾನಿಯವರ ಯೋಜನೆ ಕುರಿತು ತಿಳಿಸಲು ಮನೆ ಮನೆ ಭೇಟಿ, ಪ್ರತೀ ಬೂತ್‍ಗಳಲ್ಲಿ ಮಹಿಳಾ ಸಭೆ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತ್ರಿವಳಿ ತಲಾಖ್, ಮಹಿಳಾ ಮೀಸಲಾತಿ, ಮಹಿಳಾ ದೌರ್ಜನ್ಯಕ್ಕೆ ಕಠಿಣ ಶಿಕ್ಷೆ, ಉಜ್ವಲ ಯೋಜನೆ, ಮನೆ ನಿರ್ಮಾಣ ಮುಂತಾದ ಹಲವಾರು ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಕಾನೂನಾತ್ಮಕವಾಗಿ ಒತ್ತು ನೀಡಿದ್ದಾರೆ ಎಂದು ತಿಳಿಸಿದರು.
ಏ.9 ರಂದು ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾವೇಶದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷೆ ಮಾಳವಿಕ ಅವಿನಾಶ್, ಜಿಲ್ಲಾ ಮುಖಂಡೆ ಮಂಜುಳಾ ರಾವ್, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಜಿಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಜಿಪಂ ಮಾಜಿ ಸದಸ್ಯೆ ಮೀನಾಕ್ಷಿ ಮಂಜುನಾಥ್, ದ.ಕ.ಜಿಲ್ಲಾ ಲೋಕಸಭೆ ಅಭ್ಯರ್ಥಿ ಬ್ರಿಜೇಶ್ ಚೌಟ ಸಹಿತ ಹಲವಾರು ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಮಾತನಾಡಿ, ಏ.9 ರಂದು ನಡೆಯುವ ಸಮಾವೇಶದಲ್ಲಿ ನಮ್ಮ ಶಕ್ತಿಯನ್ನು ಮೋದಿ ಗೆಲುವಿಗಾಗಿ ಪ್ರದರ್ಶಿಸಲಿದ್ದೇವೆ. ವಿಜಯೀ ಭವ ಭಾರತದ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾ ಆರ್.ಗೌರಿ, ಪ್ರಮುಖರಾದ ಯಶಸ್ವಿನಿ ಶಾಸ್ತ್ರಿ, ಜಯಶ್ರೀ ಉಪಸ್ಥಿತರಿದ್ದರು.