ಪುತ್ತೂರು: ಯುವ ಪದವೀಧರರು ಸಮಾಜಕ್ಕೆ ತಮ್ಮನ್ನು ತಾವು ತೆರೆದುಕೊಂಡು ವೃತ್ತಿ ಜೀವನವನ್ನು ಪ್ರಾರಂಭಿಸುವ ಸಂದರ್ಭದಲ್ಲಿ ಪದವಿ ಪ್ರದಾನ ಸಮಾರಂಭ ಪ್ರೇರಣೆಯಾಗುತ್ತದೆ ಎಂದು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಆಡಳಿತ ಮಂಡಳಿಯ ಅಧ್ಯಕ್ಷ ವಿಶ್ವಾಸ್ ಶೆಣೈ ಹೇಳಿದರು.
ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿಯ ಶ್ರೀರಾಮ ಸಭಾ ಭವನದಲ್ಲಿ ನಡೆದ ಎಂಬಿಎ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.
ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಶಿಸ್ತಿಗೆ ಮಹತ್ವವನ್ನು ನೀಡಬೇಕು ಮತ್ತು ತನ್ನ ಏಳಿಗೆಗೆ ಜೀವನವನ್ನೇ ಮುಡಿಪಾಗಿಟ್ಟ ಪೋಷಕರ ತ್ಯಾಗವನ್ನು ಸ್ಮರಿಸಬೇಕೆಂದು ಹೇಳಿದರು.
ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ., ವಿದ್ಯಾರ್ಜನೆಯ ಸಮಯದಲ್ಲಿ ಪ್ರತಿ ಹೆಜ್ಜೆಯಲ್ಲೂ ಮಾತಾಪಿತರು, ಪೋಷಕರು, ಉಪನ್ಯಾಸಕರು ಸಹಕಾರಿಗಳಾಗಿರುತ್ತಾರೆ. ಈಗ ವೈಯಕ್ತಿಕವಾಗಿ ಜೀವನವನ್ನು ಕಟ್ಟಿಕೊಳ್ಳುವ ಸಮಯ ಬಂದಿದೆ. ಸಮಾಜದಲ್ಲಿ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಯಶಸ್ಸನ್ನು ಸಾಧಿಸಿ ಎಂದರು.
ಕಾಲೇಜಿನ ಪ್ರವೇಶ, ತರಬೇತಿ ಮತ್ತು ನೇಮಕಾತಿ ವಿಭಾಗ ಮುಖ್ಯಸ್ಥೆ ಪ್ರೊ. ವಂದನಾ ಶಂಕರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಬಿಎ ವಿಭಾಗದ ನಿರ್ದೇಶಕ ಡಾ.ರಾಬಿನ್ ಮನೋಹರ್ ಶಿಂಧೆ ಪ್ರತಿಜ್ಞಾ ವಿಧಿ ಬೋಧಿಸಿದರು. ಎಂಸಿಎ ವಿಭಾಗದ ನಿರ್ದೇಶಕಿ ಡಾ.ವಂದನಾ.ಬಿ.ಎಸ್ ವಂದಿಸಿದರು.