ಗದಗ: ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಮಲಗಿದಲ್ಲೇ ಭೀಕರವಾಗಿ ಕೊಲೆ ಮಾಡಿದ ಘಟನೆ ದಾಸರ ಓಣಿಯಲ್ಲಿ ನಡೆದಿದೆ.
ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಆತನ ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಏ.17 ರಂದು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕನ ಮದುವೆ ಫಿಕ್ಸ್ ಮಾಡುವ ಕಾರ್ಯಕ್ರಮಕ್ಕೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು. ಗುರುವಾರ ರಾತ್ರಿ ಪರಶುರಾಮ ಪತ್ನಿ ಲಕ್ಷ್ಮೀಯವರ ಹುಟ್ಟಿದ ಹಬ್ಬವನ್ನು ಕುಟುಂಬಸ್ಥರು ಆಚರಿಸಿದ್ದಾರೆ. ಬಳಿಕ ಪರಶುರಾಮ ಕುಟುಂಬ ಮನೆಯ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿತ್ತು.
ತಡರಾತ್ರಿ ಪರಶುರಾಮ ಕುಟುಂಬ ಮಲಗಿದ್ದ ಕೋಣೆ ಗಾಜಿನ ಕಿಟಕಿಯನ್ನು ಒಡೆದು ಒಳ ನುಗ್ಗಿದ ದುಷ್ಕರ್ಮಿಗಳು ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕಿಟಿಕಿ ಒಡೆದ ಮತ್ತು ಕಿರಿಚಾಟದ ಸದ್ದು ಕೇಳಿ ಏನಾಯಿತೆಂದು ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಕಾರ್ತಿಕ್ ನನ್ನೂ ಕೊಲೆ ಮಾಡಿದ್ದಾರೆ.
ಬಳಿಕ ದುಷ್ಕರ್ಮಿಗಳು ಮನೆಯ ಪ್ರಕಾಶ್ ಬಾಕಳೆ ಮತ್ತು ಪತ್ನಿ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಿಲು ತಟ್ಟಿದ್ದಾರೆ. ಆದರೆ ದಂಪತಿ ಬಾಗಿಲು ತೆಗೆಯದೆ ತಕ್ಷಣ ಪೊಲೀಸರಿಗೆ ಫೋನ್ ಮಾಡಿದ್ದಾರೆ. ಪೊಲೀಸರಿಗೆ ಫೋನ್ ಮಾಡುತ್ತಿದ್ದಂತೆ ದುಷ್ಕರ್ಮಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಕೊಲೆ ನಡೆದ ಪ್ರಕಾಶ್ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದರು. ಈ ವೇಳೆ ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.