ಹತ್ತು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಸಿಬ್ಬಂದಿಗಳ ಸೇವೆಯನ್ನು ಖಾಯಂಗೊಳಿಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಹತ್ತು ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಸಿಬ್ಬಂದಿ ಸೇವೆ ಖಾಯಂಗೊಳಿಸುವ ಬಗ್ಗೆ ಸಿಬ್ಬಂದಿ ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚನೆ ನೀಡಿದೆ.

ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿವಿ ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ವಿವಿ ತನ್ನ ಕೆಲಸ ಕಾರ್ಯಗಳ ಸುಗಮ ನಿರ್ವಹಣೆಗಾಗಿ ಎಸ್.ಜಿ ನಾಗೇಂದ್ರ ಸಹಿತ 13 ಮಂದಿ ಸಿಬ್ಬಂದಿಯನ್ನು ತಾತ್ಕಾಲಿಕ ನೆಲೆಯಲ್ಲಿ ನೇಮಿಸಿತ್ತು. ಈ ಸಿಬ್ಬಂದಿ 10 ವರ್ಷಕ್ಕೂ ಹೆಚ್ಚು ಸೇವೆ ಸಲ್ಲಿಸಿದ್ದಾರೆ. ಇದೀಗ ಅವರ ಸೇವೆ ಖಾಯಂಗೊಳಿಸಲು ನಿರಾಕರಿಸಿರುವ ಕ್ರಮ ಸಮರ್ಥನೀಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.































 
 

ತಾತ್ಕಾಲಿಕ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ 13 ಮಂದಿ ಸಿಬ್ಬಂದಿಯನ್ನು ಉಮಾದೇವಿ ಪ್ರಕರಣದಲ್ಲಿ ಹೈಕೋರ್ಟ್ ಸಾಂವಿಧಾನಿಕ ಪೀಠ ನೀಡಿರುವ ತೀರ್ಪಿನನ್ವಯ ಪರಿಗಣಿಸಬೇಕು ಎಂದು ಪೀಠ ತನ್ನ ತೀರ್ಪಿನಲ್ಲಿ ನಿರ್ದೇಶಿಸಿದೆ.

ಪ್ರಕರಣದ ವಿವರ :

ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ 2004-2009ರ ನಡುವೆ ಎಸ್.ಜಿ ನಾಗೇಂದ್ರ. ಎಸ್.ಆರ್ ಧನಂಜಯ ಹಾಗೂ ಕೆ.ಕೆ ವಿಮಲಾ ಸೇರಿದಂತೆ ಒಟ್ಟು 13 ಮಂದಿಯನ್ನು ಸಹಾಯಕ, ಪ್ರಯೋಗಾಲಯ ಸಹಾಯಕ ಇನ್ನಿತರ ಹುದ್ದೆಗಳಿಗೆ ತಾತ್ಕಾಲಿಕ ನೆಲೆಯಲ್ಲಿ ನೇಮಕ ಮಾಡಿತ್ತು. 2015ರ ಜುಲೈ 7ರಂದು ಇದೇ ಹುದ್ದೆಗಳಿಗೆ ಖಾಯಂ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿತ್ತು. ಈ ಅಧಿಸೂಚನೆ ಪ್ರಶ್ನಿಸಿ 13 ಸಿಬ್ಬಂದಿ ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ಮಾಡಿದ ಏಕ ಸದಸ್ಯ ಪೀಠ, 2019ರಲ್ಲಿ, ಅರ್ಜಿದಾರರು ತಮ್ಮ ಸೇವೆ ಕಾಯಂಗೊಳಿಸಲು ಕೋರಿ ವಿವಿಗೆ ಹೊಸದಾಗಿ ಮನವಿ ಪತ್ರ ಸಲ್ಲಿಸಬಹುದು ಎಂದು ಸೂಚಿಸಿತ್ತು. ಅದರಂತೆ, 2019ರ ಜೂನ್ 26ರಂದು, ಸಿಬ್ಬಂದಿ ವಿವಿಗೆ ಸಲ್ಲಿಸಿದ್ದರು. ಈ ಮನವಿಯನ್ನು ವಿವಿ ತಿರಸ್ಕರಿಸಿ, ಸೇವೆ ಕಾಯಂಗೊಳಿಸಲು ಅಸಾಧ್ಯ ಎಂಬ ಹಿಂಬರಹ ನೀಡಿತ್ತು. ವಿ.ವಿ.ಯ ಹಿಂಬರಹ ಪ್ರಶ್ನಿಸಿ ಸಿಬ್ಬಂದಿ ಮತ್ತೆ ಹೈಕೋರ್ಟ್ ಮೆಟ್ಟಿಲೇರಿದರು. ಏಕ ಸದಸ್ಯ ಪೀಠ ಸಿಬ್ಬಂದಿ ಕೋರಿಕೆ ಪುರಸ್ಕರಿಸಿ ಹಿಂಬರಹವನ್ನು ರದ್ದುಪಡಿಸಿತ್ತು. ಈ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠದಲ್ಲಿ ವಿವಿ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ವಜಾಗೊಳಿಸಿರುವ ವಿಭಾಗೀಯ ಪೀಠ, ವಿವಿಯ ಹಿಂಬರಹವನ್ನು ರದ್ದುಪಡಿಸಿದೆಯಲ್ಲದೇ, ನೌಕರರ ಮನವಿ ಪರಿಗಣಿಸುವಂತೆ ಆದೇಶಿಸಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top