ಪುತ್ತೂರು: ಮೂಡನಂಬಿಕೆ, ಅಸ್ಪೃಶ್ಯತೆ ಸೇರಿ ಸಮಾಜದ ವಿವಿಧ ಪಿಡುಗುಗಳ ವಿರುದ್ಧ ಹೋರಾಟ ಮಾಡಿದ ಬಸವಣ್ಣನವರು ವಚನಗಳ ಮೂಲಕ ಸಮಾಜದಲ್ಲಿನ ವ್ಯವಸ್ಥೆಯನ್ನು ಎಚ್ಚರಿಸುವ ಕಾರ್ಯವನ್ನು ಮಾಡಿದ್ದಾರೆ. ಅವರ ಜೀವನ, ಆದರ್ಶಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳುವ ಅನಿವಾರ್ಯತೆಯಿದೆ ಎಂದು ಪುತ್ತೂರು ತಹಸೀಲ್ದಾರ್ ಕುಂಞ ಅಹಮ್ಮದ್ ಹೇಳಿದರು.
ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಬಸವೇಶ್ವರ ಜಯಂತಿ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಯಕ ತತ್ವಕ್ಕೆ ಹೆಚ್ಚಿನ ಮಹತ್ವ ಕೊಟ್ಟ ಬಸವಣ್ಣನವರು ಅನುಭವ ಮಂಟಪದ ಸಂಸತ್ ಮಾಡಿತೋರಿಸಿದ್ದಾರೆ. ಉತ್ತಮ ಆಡಳಿತಗಾರನಾಗುವ ಜತೆಗೆ ಸಮಾಜಕ್ಕೆ ಮಾದರಿ ವ್ಯಕ್ತಿಯಾಗಿ ಬದುಕುವ ಕೆಲಸವನ್ನು ಆಗಿನ ಕಾಲದಲ್ಲಿ ಮಾಡಿ ತೋರಿಸಿದ್ದಾರೆ. ಮಹಿಳೆಯರಿಗೆ ಶಿಕ್ಷಣ ನೀಡುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಪುತ್ತೂರು ನಗರ ಸಭೆ ಪೌರಾಯುಕ್ತ ಬದ್ರುದ್ದಿನ್ ಸೌದಾಗರ, ತಾಲೂಕು ಆರೋಗ್ಯ ಅಧಿಕಾರಿ ಡಾ. ದೀಪಕ್ ರೈ ಮತ್ತಿತರರು ಉಪಸ್ಥಿತರಿದ್ದರು. ದಯಾನಂದ ಡಿ. ಟಿ. ಕಾರ್ಯಕ್ರಮ ನಿರೂಪಿಸಿದರು.