ಪುತ್ತೂರು: ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ 13ನೇ ವರ್ಷದ ಸ್ಥಾಪಕರ ದಿನಾಚರಣೆ “ಶೀಂಟೂರು ಸ್ಮೃತಿ” ಕಾರ್ಯಕ್ರಮ ಆ.14 ಬುಧವಾರ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾಚೇತನ ಸಭಾಂಗಣದಲ್ಲಿ ನಡೆಯಲಿದೆ ಎಂದು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ತಿಳಿಸಿದ್ದಾರೆ.
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಾರ್ಯಕ್ರಮದ ಅಂಗವಾಗಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಬಡ 10 ಮಂದಿ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ಶಿಷ್ಯ ವೇತನ ನೀಡಲಾಗುವುದು. ಅಲ್ಲದೆ ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕಿ ರೂಪಕಲಾ ಅವರನ್ನು ಶೀಂಟೂರು ಸನ್ಮಾನಿತರಾಗಿ ಪುರಸ್ಕೃತರಾಗಿದ್ದು, ಅವರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಬೆಳಿಗ್ಗೆ 10 ಕ್ಕೆ ನಡೆಯುವ ಕಾರ್ಯಕ್ರಮವನ್ನು ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.ಬ್ರಿಜೇಶ್ ಚೌಟ ಉದ್ಘಾಟಿಸಿ, ಸನ್ಮಾನ ನೆರವೇರಿಸುವರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಬಳ್ಳಾರಿ ಕುಮಾರಸ್ವಾಮಿ ಮಿನರಲ್ ಎಕ್ಸ್ ಪೋರ್ಟ್ಸ್ ನ ಮಲಾರ್ ಬೀಡು ರವೀಂದ್ರನಾಥ ಆಳ್ವ, ಗುಜರಾತ್ ಗ್ರೀನ್ ಹೀರೋ ಆಫ್ ಇಂಡಿಯಾದ ಸಹ ಸಂಸ್ಥಾಪಕ ಡಾ.ಆರ್.ಕೆ.ನಾಯರ್, ದ.ಕ. ಮತ್ತು ಉಡುಪಿ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಸವಣೂರು ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ವಿಶ್ವಸ್ಥ ಎನ್.ಸುಂದರ ರೈ ನಡುಮನೆ ಪಾಲ್ಗೊಳ್ಳುವರು. ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಚಂದ್ರಶೇಖರ ಪೇರಾಲು ಶೀಂಟೂರು ಸಂಸ್ಮರಣೆ ಮಾಡುವರು ಎಂದು ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್. ಶೆಟ್ಟಿ, ಎಸ್ ಎನ್ ಆರ್ ರೂರಲ್ ಎಜ್ಯುಕೇಶನ್ ಟ್ರಸ್ಟ್ ನಿರ್ದೇಶಕಿ ರಶ್ಮಿ ಅಶ್ವಿನ್ ಎಲ್. ಶೆಟ್ಟಿ, ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೀತಾರಾಮ ಕೇವಳ, ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲೆ ಶಶಿಕಲಾ ಎಸ್. ಆಳ್ವ, ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಡಾ.ನಾರಾಯಣ ಮೂರ್ತಿ ಕೆ. ಉಪಸ್ಥಿತರಿದ್ದರು.