ಬೆಂಗಳೂರು : ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ನಡೆಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನ್ಯಾಯಾಂಗ ಹೋರಾಟಕ್ಕೆ ಮುಂದಾಗಿದ್ದು, ಇಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿ ರಾಜ್ಯಪಾಲರ ಅನುಮತಿ ರದ್ದುಪಡಿಸಬೇಕೆಂದು ಕೋರಿದ್ದಾರೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಹಾಗೂ ಮೂವರು ದೂರುದಾರರನ್ನು ಪ್ರತಿವಾದಿಗಳನ್ನಾಗಿಸಿ ಅರ್ಜಿ ಸಲ್ಲಿಸಲಾಗಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ಕಾನೂನಿನ ಪ್ರಕ್ರಿಯೆ ಪಾಲಿಸಿಲ್ಲ. ಸಚಿವ ಸಂಪುಟದ ಶಿಫಾರಸಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಸಂವಿಧಾನ 163ನೇ ವಿಧಿಯಂತೆ ಸಂಪುಟದ ಶಿಫಾರಸು ಪಾಲಿಸಬೇಕು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮುನ್ನ ದಾಖಲೆಗಳನ್ನು ಪರಿಶೀಲಿಸಿಲ್ಲ. ಹೀಗಾಗಿ ಇಂದೇ ತುರ್ತು ವಿಚಾರಣೆ ನಡೆಸಬೇಕು ಎಂದು ಸಿಎಂ ಪರ ವಕೀಲ ರವಿವರ್ಮ ಕುಮಾರ್ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಪರ ವಕೀಲರ ವಾದ ಆಲಿಸಿದ ಹೈಕೋರ್ಟ್ ಮಧ್ಯಾಹ್ನ 2.30ಕ್ಕೆ ವಿಚಾರಣೆ ನಿಗದಿಪಡಿಸಲು ಸೂಚಿಸಿದೆ. ಸಿದ್ದರಾಮಯ್ಯ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಫ್ಟಿ ಮತ್ತು ಕಪಿಲ್ ಸಿಬಲ್ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಹೀಗಾಗಿ ಇಂದು ಮಂತ್ರಾಲಯ ಪ್ರವಾಸ ಕೈಗೊಳ್ಳಬೇಕಿದ್ದ ಸಿಎಂ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ರಾಜ್ಯದಾದ್ಯಂತ ಸಿಎಂ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು, ಮಂಗಳೂರು, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಪ್ರತಿಭಟನೆ ತೀವ್ರಗೊಂಡಿದೆ.