ಮುಡಾ, ವಾಲ್ಮೀಕಿ ನಿಗಮ ಹಗರಣ ಆರೋಪಕ್ಕೆ ಕಾಂಗ್ರೆಸ್ ಮುಯ್ಯಿ
ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಹಗರಣಗಳ ಮತ್ತು ಇತರ ಹಗರಣಗಳ ತನಿಖೆಯ ಪ್ರಗತಿ ಪರಿಶೀಲನೆ ಮತ್ತು ಮೇಲುಸ್ತುವಾರಿಗೆ ಗೃಹಸಚಿವ ಡಾ. ಜಿ ಪರಮೇಶ್ವರ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಈ ವಿಚಾರವಾಗಿ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಗಳ ಪ್ರಗತಿ, ಸಮನ್ವಯ ಮುಂತಾದ ಕಾರ್ಯಗಳಿಗೆ ಸಂಬಂಧಿಸಿದಂತೆ ಕ್ರಮ ವಹಿಸಲು ಈ ಕೆಳಕಂಡಂತೆ ಸಚಿವರುಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ ಎಂದು ಉಲ್ಲೇಖಿಸಿರುವ ಸಿದ್ದರಾಮಯ್ಯ, ಸಮಿತಿಯ ಸದಸ್ಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ, ಕಂದಾಯ
ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಸಮಿತಿಯಲ್ಲಿರುವ ಸಚಿವರು. ಸಮಿತಿ ಮುಂದಿನ ಎರಡು ತಿಂಗಳಲ್ಲಿ ಜವಾಬ್ದಾರಿಯನ್ನು ಪೂರ್ಣಗೊಳಿಸುವಂತೆ ಕೋರಿದೆ ಎಂದು ಆದೇಶದಲ್ಲಿ ಸಿಎಂ ಹೇಳಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಮತ್ತು ಮುಡಾ ಹಗರಣ ವಿಚಾರವಾಗಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಹಳೆಯ ಹಗರಣಗಳನ್ನು ಮುನ್ನೆಲೆಗೆ ತರಲು ಯತ್ನಿಸುತ್ತಿದೆ. ಈಗಾಗಲೇ ಮಾಜಿ ಸಚಿವರು, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಕಾಂಗ್ರೆಸ್ ನಾಯಕರು ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹಿಂದಿನ ಸರ್ಕಾರದ ಹಗರಣಗಳ ತನಿಖೆಗೆ ಸಮಿತಿ ರಚಿಸುವುದಾಗಿ ಕಾಂಗ್ರೆಸ್ ಸರ್ಕಾರ ಹೇಳಿತ್ತು.