ಮಂಡ್ಯ : ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ, ಕೋಮು ಹಿಂಸಾಚಾರ

ಅಂಗಡಿ ವಾಹನಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ, ಶಾಲಾ ಕಾಲೇಜುಗಳಿಗೆ ರಜೆ

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶನ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಕಲ್ಲುತೂರಾಟವಾಗಿ ಬಳಿಕ ಕೋಮು ಗಲಭೆ ಸಂಭವಿಸಿ ಪರಿಸ್ಥಿತಿ ಬಿಗಡಾಯಿಸಿದ್ದು, ಇಂದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕಿಡಿಗೇಡಿಗಳು ಮೆರವಣಿಗೆಯ ಮೇಲೆ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ನಡುರಸ್ತೆಯಲ್ಲೇ ತಲ್ವಾರ್, ಲಾಂಗು, ರಾಡ್‌ಗಳನ್ನು ಜಳಪಿಸಿದ್ದಾರೆ. ಪೆಟ್ರೋಲ್ ಬಾಂಬ್ ದಾಳಿಗೆ ಅಂಗಡಿಗಳು ಹೊತ್ತಿ ಉರಿದಿವೆ. ಪೊಲೀಸ್ ಠಾಣೆ ಮುಂದೆಯೇ ಹಿಂದೂ ಸಂಘಟನೆಗಳ ಆಕ್ರೋಶ ಸ್ಫೋಟಗೊಂಡಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಬುಧವಾರ ರಾತ್ರಿ ಅಕ್ಷರಶಃ ಹೊತ್ತಿ ಉರಿದಿದೆ. ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕೋಮುಗಲಭೆ ಉಂಟಾಗಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ನಾಗಮಂಗಲ ಪಟ್ಟಣದ ಬದರಿಕೊಪ್ಪಲಿನಲ್ಲಿ 5 ದಿನಗಳ ಹಿಂದೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಬುಧವಾರ ಸಂಜೆ ವಿಸರ್ಜನಾ ಮೆರವಣಿಗೆ ಹೊರಟಿತ್ತು, ಪಟಾಕಿ ಸಿಡಿಸುತ್ತಾ, ಡೊಳ್ಳು, ತಮಟೆ, ಡಿಜೆ ಸೌಂಡ್‌ನೊಂದಿಗೆ ಹಿಂದೂಗಳು ಗಣೇಶನ ಮೂರ್ತಿ ವಿಸರ್ಜನೆಗೆ ಮೆರವಣಿಗೆ ಹೊರಟಿದ್ದರು.
ಬದರಿಕೊಪ್ಪಲಿನಿಂದ ಹೊರಟ ಗಣೇಶನ ವಿಸರ್ಜನಾ ಮೆರವಣಿಗೆ ಮಂಡ್ಯ ಸರ್ಕಲ್ ಮಾರ್ಗವಾಗಿ ತೆರಳಿತ್ತು. ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯತ್ತ ಮೆರವಣಿಗೆ ಹೊರಟಿತ್ತು. ಆದರೆ ನಾಗಮಂಗಲದ ಮಂಡ್ಯ ಸರ್ಕಲ್ ಬಳಿಯೇ ಕೆಲ ಮುಸ್ಲಿಮ್‌ ಯುವಕರು ಮೆರವಣಿಗೆಗೆ ತಡೆಯೊಡ್ದಿದ್ದಾರೆ. ಮಸೀದಿ ಮುಂದೆ ಡಿಜೆ ಸೌಂಡ್, ತಮಟೆ, ಡೊಳ್ಳು ಬಾರಿಸದಂತೆ ಕ್ಯಾತೆ ತೆಗಿದ್ದಿದ್ದಾರೆ. ಈ ವೇಳೆ ಎರಡು ಗುಂಪಿನ ನಡುವೆ ಮಾತಿನ ಚಕಮಕಿ ನಡೆದಿದೆ.
ಇದಕ್ಕೆ ಕೇರ್ ಮಾಡದ ಗಣೇಶನ ವಿಸರ್ಜನಾ ತಂಡ, ಮೈಸೂರು ರಸ್ತೆಯಲ್ಲಿರುವ ಯಾ ಅಲ್ಲಾ ಮಸೀದಿ ಮತ್ತು ದರ್ಗಾ ಮುಂಭಾಗದ ರಸ್ತೆಯಲ್ಲಿ ಮೆರವಣಿಗೆ ಹೊರಟಿದೆ. ಮಸೀದಿಯಿಂದ ಸ್ವಲ್ಪ ದೂರ ಮುಸ್ಲಿಮ್‌ ಯುವಕರು ಏಕಾಏಕಿ ಗಣೇಶ ವಿಸರ್ಜನಾ ಮೆರವಣಿಗೆಯತ್ತ ಕಲ್ಲು ತೂರಾಟ ನಡೆಸಿದ್ದಾರೆ. ಕಟ್ಟಡದ ಮೇಲೆ ನಿಂತುಕೊಂಡು ಸಹ ಮನಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ. ಆಗ ಗಲಾಟೆ ಶುರುವಾಗಿದೆ. ಹಿಂದೂಗಳು ಮತ್ತು ಮುಸ್ಲಿಮರ ನಡುವೆ ವಾಕ್ಸಮರ, ತಳ್ಳಾಟ ನೂಕಾಟ ನಡೆದಿದೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಕಲ್ಲುತೂರಾಟ ನಡೆಸಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಹಿಂದೂಗಳು ನಾಗಮಂಗಲ ಪೊಲೀಸ್ ಠಾಣೆ ಮುಂದೆಯೇ ಗಣೇಶನ ವಿಗ್ರಹವನ್ನಿಟ್ಟು ಪ್ರತಿಭಟನೆ ನಡೆಸಿದ್ದಾರೆ.



































 
 

ಇದಾದ ಸ್ವಲ್ಪಹೊತ್ತಿನಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ನಾಗಮಂಗಲದ ಮಂಡ್ಯ ಸರ್ಕಲ್‌ನಲ್ಲಿ ಮುಸ್ಲಿಮ್‌ ಯುವಕರ ಗುಂಪು ಸಿಕ್ಕಸಿಕ್ಕ ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪೆಟ್ರೋಲ್ ಬಾಂಬ್‌ಗಳನ್ನು ತೂರಿದೆ. ಗುಜರಿ ಅಂಗಡಿಯೊಂದು ಧಗಧಗಿಸಿ ಉರಿದಿದೆ. ಬೈಕ್ ಶೋರೂಂ ಒಂದನ್ನು ಧ್ವಂಸಗೊಳಿಸಲಾಗಿದೆ. ಬೈಕ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಕೆಲವು ಕಿಡಿಗೇಡಿಗಳು ರಸ್ತೆಯಲ್ಲೇ ಲಾಂಗು, ರಾಡ್‌, ತಲ್ವಾರ್‌ಗಳನ್ನು ಜಳಪಿಸುತ್ತಾ ಅಟ್ಟಹಾಸ ಪ್ರದರ್ಶಿಸಿದ್ದಾರೆ. ವಾಹನಗಳ ಮೇಲೆ ದಾಳಿ ಮಾಡಿದ್ದಾರೆ. ಪೊಲೀಸರು ಕಿಡಿಗೇಡಿಗಳಿಂದ ಲಾಂಗ್‌ ಮತ್ತಿತರ ಮಾರಕಾಸ್ತ್ರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಮಂಡ್ಯ ಜಿಲ್ಲಾ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಪರಿಸ್ಥಿತಿ ಹತೋಟಿಯಲ್ಲಿದ್ದು ಸೆಪ್ಟೆಂಬರ್​ 14ರವರೆಗೆ ಸೆಕ್ಷನ್ 144 ಅಡಿ ನಿಷೇಧಾಜ್ಞೆ ಹೇರಲಾಗಿದೆ.

ನಾಗಮಂಗಲದಲ್ಲಿ ಸದ್ಯ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರತಾ ಕ್ರಮವಾಗಿ ಇಂದು ನಾಗಮಂಗಲದಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ. ಗಲಭೆ ಪ್ರಕರಣ ಸಂಬಂಧ 50 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗಮಂಗಲ ಗಲಾಟೆ ಕುರಿತು ಟ್ವೀಟ್‌ ಮಾಡಿರುವ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಕೋಮುವಾದಿ ಸಂಘಿ ಸಂಘಟನೆಗಳು ಮುಸ್ಲಿಮರ ಅಂಗಡಿಗಳ ಮೇಲೆ ಕಲ್ಲು ತೂರಾಟ ಮಾಡಿವೆ. ದಾಳಿ ನಡೆಸಿ ಬೆಂಕಿ ಹಚ್ಚಿವೆ. ಅಂಗಡಿಗಳನ್ನು ಲೂಟಿ ಮಾಡಿ ನಷ್ಟ ಉಂಟುಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top