ಬೆಂಗಳೂರು: ನಾಗಮಂಗಲದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಬುಧವಾರ ರಾತ್ರಿ ಸಂಭವಿಸಿದ ಕೋಮು ಗಲಭೆಯನ್ನು ಖಂಡಿಸಿರುವ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷ ಮತ್ತು ರಾಜ್ಯ ಸರಕಾರ ರಾಜಕೀಯ ಸ್ವಾರ್ಥಕ್ಕಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಅತಿಯಾಗಿ ಓಲೈಸಿ ತುಷ್ಟೀಕರಣ ಮಾಡಿದ ಫಲವಾಗಿ ಈ ಹೇಯ ಘಟನೆ ನಡೆದಿದೆ. ಇಂತಹ ಓಲೈಕೆ, ತುಷ್ಟೀಕರಣ ರಾಜಕಾರಣ ನಿಲ್ಲಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷಕ್ಕೆ ಕೆಟ್ಟ ದಿನಗಳು ದೂರವಿಲ್ಲ ಎಂದು ಎಚ್‌ಡಿಕೆ ಹೇಳಿದ್ದಾರೆ.
ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿ ದಾಂಧಲೆ ಎಬ್ಬಿಸಿರುವುದನ್ನು ತಡೆಯಲು ವಿಫಲವಾಗಿರುವುದು ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಅವರು ಎಕ್ಸ್ನಲ್ಲಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ಗಣಪತಿ ದೇವರ ಮೆರವಣಿಗೆಯಲ್ಲಿ ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಜಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದು ಅವರು ಟೀಕಿಸಿದ್ದಾರೆ.