ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40 ಪರ್ಸೆಂಟ್ ಕಮಿಷನ್ ಆರೋಪ ಮತ್ತು ‘ಪೇ ಸಿಎಂ’ ಅಭಿಯಾನ ನಡೆಸಲು ಪೂರಕವಾದ ಆರೋಪ ಮಾಡಿ ರಾಜ್ಯದಾದ್ಯಂತ ಸುದ್ದಿಯಾಗಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಕುಟುಂಬದ ಮೂಲಗಳು ತಿಳಿಸಿವೆ.
ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದರು. ಆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು.
ಈ ವಿಚಾರವನ್ನೇ ಹಿಡಿದುಕೊಂಡು ಕಾಂಗ್ರೆಸ್ ಬಿಜೆಪಿ ಸರಕಾರದ ವಿರುದ್ಧ ಪ್ರಚಾರ ನಡೆಸಿ ಚುನಾವಣೆಯಲ್ಲಿ ಲಾಭ ಮಾಡಿಕೊಂಡಿತ್ತು. ಈ ಕಾರಣಕ್ಕೆ ಕೆಂಪಣ್ಣ ರಾಜಕೀಯ ವಿವಾದದ ಕೇಂದ್ರವಾಗಿದ್ದರು.