ಅತ್ಯಾಚಾರ, ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಬಂಧಿಸಿದ ಪೊಲೀಸರು
ಬೆಂಗಳೂರು : ಗುತ್ತಿಗೆದಾರನಿಗೆ ಬೆದರಿಕೆ ಹಾಕಿದ ಹಾಗೂ ಜಾತಿ ನಿಂದನೆ ಮಾಡಿದ ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದಿದ್ದ ಆರ್.ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ರಾಮನಗರದ ಕಗ್ಗಲೀಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. 2020ರಿಂದ 2022ರವರೆಗೆ ಶಾಸಕ ಮುನಿರತ್ನ ತನ್ನ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ ಎಂದು ರಾಜರಾಜೇಶ್ವರಿ ನಗರದ 40 ವರ್ಷದ ಮಹಿಳೆ ದೂರು ದಾಖಲಿಸಿದ್ದಾರೆ.
ಈ ದೂರಿನ ಆಧಾರದ ಮೇಲೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ಕಗ್ಗಲೀಪುರ ಠಾಣೆ ಪೊಲೀಸರು ಶಾಸಕ ಮುನಿರತ್ನ ಅವರನ್ನು ಬಂಧಿಸಿದ್ದಾರೆ.
ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆಯಲ್ಲಿ ಕಮಿಷನ್ ನೀಡುವಂತೆ ಗುತ್ತಿಗೆದಾರ ಚಲುವರಾಜ್ ಅವರಿಗೆ ಜೀವ ಬೆದರಿಕೆ ಹಾಕಿ ನಿಂದಿಸಿದ ಹಾಗೂ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ವೈಯಾಲಿಕಾವಲ್ ಠಾಣೆಯಲ್ಲಿ ಮುನಿರತ್ನ ವಿರುದ್ಧ ಪ್ರತ್ಯೇಕ ಎಫ್‌ಐಆರ್ ದಾಖಲಾಗಿದ್ದವು.
ಈ ಕೃತ್ಯ ಬೆಳಕಿಗೆ ಬಂದ ನಂತರ ನಗರ ತೊರೆದು ಆಂಧ್ರ ಪ್ರದೇಶದತ್ತ ಹೊರಟಿದ್ದ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ಸಮೀಪ ಶನಿವಾರ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದ ಪೊಲೀಸರ ವಿಚಾರಣೆ ಮುಗಿದು ಮಾಜಿ ಸಚಿವರು ಜೈಲು ಸೇರಿದ ಬೆನ್ನಲ್ಲೇ ಶಾಸಕರ ವಿರುದ್ಧ ಅತ್ಯಾಚಾರ ಹಾಗೂ ಹನಿಟ್ರ್ಯಾಪ್ ಆರೋಪಗಳು ಕೇಳಿ ಬಂದಿವೆ. ಈ ಪ್ರಕರಣದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.